ತಾಲೂಕು ಕ್ರೀಡಾಂಗಣದಲ್ಲಿ ಧ್ವಜಾರೋಹಣ
ಭಟ್ಕಳ: ತಾಲ್ಲೂಕಾ ಆಡಳಿತ, ತಾಲೂಕು ಪಂಚಾಯತ್, ಭಟ್ಕಳ ಪುರಸಭೆ ಹಾಗೂ ಜಾಲಿ ಪಟ್ಟಣ ಪಂಚಾಯತ್ಗಳ ಸಂಯುಕ್ತ ಆಶ್ರಯದಲ್ಲಿ 77ನೇ ಗಣರಾಜ್ಯೋತ್ಸವವನ್ನು ಭಟ್ಕಳದ ತಾಲೂಕು ಕ್ರೀಡಾಂಗಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ತಹಶೀಲ್ದಾರ್ ನಾಗೇಂದ್ರ ಕೋಳಶೆಟ್ಟಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ನಂತರ ಮಾತನಾಡಿದ ಅವರು, 1950ರ ಜನವರಿ 26ರಂದು ಜಾರಿಗೆ ಬಂದ ಭಾರತೀಯ ಸಂವಿಧಾನದಿಂದ ಭಾರತವು ಸಾರ್ವಭೌಮ, ಸಮಾಜವಾದಿ, ಜಾತ್ಯಾತೀತ ಹಾಗೂ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರೂಪುಗೊಂಡಿದೆ ಎಂದರು. ಸಂವಿಧಾನವು ನಾಗರಿಕರಿಗೆ ಸಮಾನ ಹಕ್ಕುಗಳನ್ನು ನೀಡುವುದರ ಜೊತೆಗೆ ರಾಷ್ಟ್ರದ ಏಕತೆ, ಅಖಂಡತೆ ಹಾಗೂ ಸಾಮಾಜಿಕ ನ್ಯಾಯವನ್ನು ಕಾಪಾಡುವ ಜವಾಬ್ದಾರಿಯನ್ನೂ ವಿಧಿಸಿದೆ ಎಂದು ಹೇಳಿದರು.
ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವ ಎಂಬ ಸಂವಿಧಾನದ ಮೂಲ ತತ್ತ್ವಗಳು ಆಡಳಿತ ವ್ಯವಸ್ಥೆಗೆ ದಿಕ್ಕು ತೋರಿಸುತ್ತಿವೆ. ಭಾರತೀಯ ಸಂವಿಧಾನದ ಪ್ರಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ದೂರದೃಷ್ಟಿ ಹಾಗೂ ಸಾಮಾಜಿಕ ಬದ್ಧತೆಯಿಂದ ದೇಶದ ಆಡಳಿತಕ್ಕೆ ಬಲಿಷ್ಠ ಅಡಿಪಾಯ ಸಿಕ್ಕಿದೆ ಎಂದು ಹೇಳಿದರು.
ತಾಲೂಕು ಆಡಳಿತವು ಸರ್ಕಾರ ಮತ್ತು ಜನಸಾಮಾನ್ಯರ ನಡುವಿನ ಪ್ರಮುಖ ಕೊಂಡಿಯಾಗಿದ್ದು, ಜನಕಲ್ಯಾಣ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಭೂ ದಾಖಲೆಗಳ ಡಿಜಿಟಲೀಕರಣ, ಪಹಣಿ ತಿದ್ದುಪಡಿ ಪ್ರಕ್ರಿಯೆಯ ಸರಳೀಕರಣ, ಸಾಮಾಜಿಕ ಭದ್ರತಾ ಯೋಜನೆಗಳ ಪಾರದರ್ಶಕ ವಿತರಣೆ, ಪ್ರಕೃತಿ ವಿಕೋಪ ಸಂದರ್ಭದಲ್ಲಿ ತ್ವರಿತ ಪರಿಹಾರ, ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ, ಕುಡಿಯುವ ನೀರು ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ವಿವರಿಸಿದರು.
ಜನಸ್ಪಂದನ ಹಾಗೂ ತಾಲೂಕು ಮಟ್ಟದ ಸಭೆಗಳ ಮೂಲಕ ಸಾರ್ವಜನಿಕ ಅಹವಾಲುಗಳಿಗೆ ಸ್ಪಂದಿಸಲಾಗುತ್ತಿದೆ. ನಾಗರಿಕರು ಕಾನೂನಿಗೆ ಗೌರವ ನೀಡಿ ಸರ್ಕಾರಿ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳು ಹಾಗೂ ಯುವಜನರು ಶಿಸ್ತು, ಪ್ರಾಮಾಣಿಕತೆ ಮತ್ತು ರಾಷ್ಟ್ರಪ್ರೇಮವನ್ನು ಜೀವನ ಮೌಲ್ಯಗಳಾಗಿ ಅಳವಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಹಾಗೂ ಶಾಲಾ–ಕಾಲೇಜು ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು. ಉತ್ತಮ ಪ್ರದರ್ಶನ ನೀಡಿದ ತಂಡಗಳಿಗೆ ಬಹುಮಾನ ವಿತರಿಸಲಾಯಿತು. 2024–25ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ತಾಲ್ಲೂಕಿನ ಮೂವರು ವಿದ್ಯಾರ್ಥಿಗಳಿಗೆ ತಲಾ ₹50 ಸಾವಿರ ಮೊತ್ತದ ಚೆಕ್ಗಳನ್ನು ವಿತರಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಾಲಿ ಪಟ್ಟಣ ಪಂಚಾಯತ್ ಅಧ್ಯಕ್ಷೆ ಖಾಜೀಯಾ ಅಫ್ಸಾ ಹುಜೈಫಾ, ಗ್ಯಾರಂಟಿ ಯೋಜನೆ ಅಧ್ಯಕ್ಷ ರಾಜು ಮಂಜಪ್ಪ ನಾಯ್ಕ, ಜಾಲಿ ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಸೈಯದ್ ಇಮ್ರಾಬ್ ಲಂಕಾ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಎನ್. ನಾಯ್ಕ, ಕ್ಷೇತ್ರಶಿಕ್ಷಣಾಧಿಕಾರಿ ವೆಂಕಟೇಶ ನಾಯಕ, ಪುರಸಭಾ ಮುಖ್ಯಾಧಿಕಾರಿ ವೆಂಕಟೇಶ್ ನಾವುಡ್, ಸಿಪಿಐ ದಿವಾಕರ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸುನೀಲ್ ಎಂ. ಸ್ವಾಗತಿಸಿದರು. ಶಿಕ್ಷಕ ಶ್ರೀಧರ್ ಶೇಟ್ ಕಾರ್ಯಕ್ರಮ ನಿರೂಪಿಸಿದರು.

More Stories
ಮುರುಡೇಶ್ವರ ಬೈಲೂರು ಕಲ್ಲು ತೂರಾಟ ಪ್ರಕರಣ
ಭಟ್ಕಳದ ‘ಸಂಶುದ್ದೀನ್ ಸರ್ಕಲ್’ ಗೋಪುರ ನೆಲಸಮ:ಇನ್ನೂನೆನಪು ಮಾತ್ರ
ಶ್ರೀವಲಿ ಪದವಿ ಪೂರ್ವ ಕಾಲೇಜುನಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ