March 12, 2026

ಮಾರ್ಚ್ 14ರಂದು ಭಟ್ಕಳದಲ್ಲಿ ಮೊದಲ ಲೋಕ್ ಅದಾಲತ್


ಭಟ್ಕಳ: ಲೋಕ್ ಅದಾಲತ್ ಮೂಲಕ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಗೊಳಿಸಿದರೆ ಕಕ್ಷಿದಾರರಿಗೆ ಸಮಯ ಮತ್ತು ಹಣದ ಉಳಿತಾಯವಾಗುವುದರ ಜೊತೆಗೆ ಮಾನಸಿಕ ನೆಮ್ಮದಿಯೂ ದೊರೆಯುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರವಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ದಿವ್ಯಶ್ರೀ ಸಿ.ಎಂ ಹೇಳಿದರು.


ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2026ರ ಮೊದಲ ಲೋಕ್ ಅದಾಲತ್ ಮಾರ್ಚ್ 14ರಂದು ನಡೆಯಲಿದೆ ಎಂದು ತಿಳಿಸಿದರು.


ವಕೀಲರು ತಮ್ಮ ಕಕ್ಷಿದಾರರಿಗೆ ಲೋಕ್ ಅದಾಲತ್‌ನ ಮಹತ್ವ ತಿಳಿಸಿದರೆ ಹೆಚ್ಚಿನ ಪ್ರಕರಣಗಳನ್ನು ಮಧ್ಯಸ್ಥಿಕೆ ಹಾಗೂ ರಾಜಿ ಮೂಲಕ ಇತ್ಯರ್ಥಗೊಳಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.


ಕಳೆದ ಲೋಕ್ ಅದಾಲತ್‌ನಲ್ಲಿ ಜಿಲ್ಲೆಯಲ್ಲಿ ಒಟ್ಟು 5,998 ಪ್ರಕರಣಗಳು ಇತ್ಯರ್ಥಗೊಂಡಿದ್ದು, ಅವುಗಳಲ್ಲಿ ಭಟ್ಕಳ ತಾಲೂಕಿನಲ್ಲಿ ಅತಿ ಹೆಚ್ಚು 2,000 ಪ್ರಕರಣಗಳು ಇತ್ಯರ್ಥಗೊಂಡಿರುವುದು ವಿಶೇಷವಾಗಿದೆ ಎಂದು ಮಾಹಿತಿ ನೀಡಿದರು.
ಹಣಕಾಸು ಸಂಸ್ಥೆಗಳ ಸಾಲ ಮರುಪಾವತಿ, ಚೆಕ್ ಬೌನ್ಸ್ ಮತ್ತು ಅಪಘಾತ ಪ್ರಕರಣಗಳು ಲೋಕ್ ಅದಾಲತ್‌ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಇತ್ಯರ್ಥಗೊಳ್ಳುತ್ತಿವೆ. ಸಿವಿಲ್ ಪ್ರಕರಣಗಳು ಹಾಗೂ ರಾಜಿ ಮಾಡಿಕೊಳ್ಳಬಹುದಾದ ಅಪರಾಧ ಪ್ರಕರಣಗಳನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಇತ್ಯರ್ಥಗೊಳಿಸುವ ಅಗತ್ಯವಿದೆ ಎಂದು ಹೇಳಿದರು.


ಮಧ್ಯಸ್ಥಿಕೆ ಪ್ರಕ್ರಿಯೆಯ ಮೂಲಕ ಪಕ್ಷಗಾರರು ಪರಸ್ಪರ ಮಾತುಕತೆ ನಡೆಸಿ ಪ್ರಕರಣಗಳನ್ನು ಸುಲಭವಾಗಿ ಇತ್ಯರ್ಥಗೊಳಿಸಬಹುದು. ಆದರೆ ಕೆಲವೊಮ್ಮೆ ಪಕ್ಷಗಾರರು ಗೈರು ಹಾಜರಾಗುವುದರಿಂದ ಮಧ್ಯಸ್ಥಿಕೆ ಮೂಲಕ ಪ್ರಕರಣಗಳ ಇತ್ಯರ್ಥ ಕಡಿಮೆಯಾಗುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರು ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಕಾಂತ ಕುರಣಿ, ವಕೀಲರ ಸಂಘದ ಅಧ್ಯಕ್ಷ ಈಶ್ವರ ನಾಯ್ಕ, ಪ್ರಥಮ ದರ್ಜೆ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶೆ ದೀಪಾ ಅರಳಗುಂಡಿ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಧನವತಿ, ವಕೀಲರ ಸಂಘದ ಕಾರ್ಯದರ್ಶಿ ನ್ಯಾಯವಾದಿ ನಾಗೇಶ ಗದ್ದೆಮನೆ ಹಾಗೂ ಉಪಾಧ್ಯಕ್ಷ ಆರ್.ಜಿ. ನಾಯ್ಕ ಉಪಸ್ಥಿತರಿದ್ದರು.

About The Author

error: Content is protected !!