

ಭಟ್ಕಳ: ಅಖಿಲ ಹವ್ಯಕ ಮಹಾಸಭಾ ವತಿಯಿಂದ ಶ್ರೀ ಕ್ಷೇತ್ರ ಬೆಳಕೆಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಧಂತ್ಯುತ್ಸವ ಹಾಗೂ ಹವ್ಯಕ ಭವನ ಲೋಕಾರ್ಪಣೆ ಕಾರ್ಯಕ್ರಮ ಮೇ 1 ಮತ್ತು 2ರಂದು ವೈಭವದಿಂದ ನಡೆಯಲಿದೆ. ಈ ಸಂದರ್ಭದಲ್ಲಿ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರ ಸಾನ್ನಿಧ್ಯ ಇರಲಿದೆ ಎಂದು ಮಹಾಸಭಾದ ಕಾರ್ಯದರ್ಶಿ ಪ್ರಶಾಂತ ಭಟ್ಟ ತಿಳಿಸಿದ್ದಾರೆ.

ಇಲ್ಲಿನ ಬೆಳಕೆ ದುರ್ಗಾಪರಮೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 1ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿವೆ ಎಂದರು. ಮೇ 2ರಂದು ಬೆಳಿಗ್ಗೆ 10.30ಕ್ಕೆ ಸ್ವಾಮೀಜಿ ಆಗಮಿಸಿ ನೂತನ ಸಭಾಭವನವನ್ನು ಉದ್ಘಾಟಿಸಲಿದ್ದಾರೆ. ಬಳಿಕ ಬೆಳಿಗ್ಗೆ 11.30ಕ್ಕೆ ಧರ್ಮಸಭೆ ನಡೆಯಲಿದ್ದು, ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಸಚಿವ ಮಂಕಾಳ ಎಸ್ ವೈದ್ಯ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ, ಮಾಜಿ ಶಾಸಕ ಸುನೀಲ ನಾಯ್ಕ ಹಾಗೂ ಭೂದಾನಿ ಮಂಜುನಾಥ ಬಿಲ್ಲವ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಅಖಿಲ ಹವ್ಯಕ ಮಹಾಸಭಾ ಅಧ್ಯಕ್ಷ ಡಾ. ಗಿರಿಧರ ಕಜೆ ಅಧ್ಯಕ್ಷತೆ ವಹಿಸಲಿದ್ದಾರೆ.
ಸುಮಾರು ₹75 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಈ ಸುಸಜ್ಜಿತ ಸಭಾಭವನವು ಬೆಳಕೆ, ಗೊರ್ಟೆ ಸೇರಿದಂತೆ ಸುತ್ತಮುತ್ತಲಿನ ಭಾಗದ ಜನರಿಗೆ ಉಪಯುಕ್ತವಾಗಲಿದೆ. ನಾಲ್ಕೈದು ವರ್ಷಗಳ ಹಿಂದೆ ಉದ್ಯಮಿ ಮಂಜುನಾಥ ಬಿಲ್ಲವ ಅವರು ಜಾಗವನ್ನು ದಾನವಾಗಿ ನೀಡಿದ್ದು, ಅದರ ನಂತರ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ದೇವಸ್ಥಾನದ ಸಂಚಾಲಕ ನಾಗರಾಜ ಮಧ್ಯಸ್ಥ, ಅರ್ಚಕ ಸುಮಂತ ಭಟ್ಟ, ವೇಮೂ. ವಿಶ್ವನಾಥ ಭಟ್ಟ ಸೇರಿದಂತೆ ಇತರರು ಉಪಸ್ಥಿತರಿದ್ದರು.


About The Author




More Stories
ತೆರೆದ ಚರಂಡಿ ಹೊಂಡ: ಅಪಾಯದ ನಡುವೆ ಭಟ್ಕಳದ ವಾಹನ ಸವಾರರ ಸಂಚಾರ.
ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಮಂಕಾಳ್ ಎಸ್. ವೈದ್ಯ ಆಯ್ಕೆ: ಮಾಜಿ ಸಚಿವರಿಗೆ ಭಟ್ಕಳದಲ್ಲಿ ಅದ್ಧೂರಿ ಸ್ವಾಗತ.
ಆಗಸ್ಟ್ 18ರಂದು ಭಟ್ಕಳದಲ್ಲಿ ಬೃಹತ್ ರಕ್ತದಾನ ಶಿಬಿರ: ಡಾ. ಸುರೇಶ ನಾಯಕ್ ಸ್ಮರಣಾರ್ಥ ಆಯೋಜನೆ