July 27, 2026

ಬೀನಾ ವೈದ್ಯ ಶಿಕ್ಷಣ ಸಂಸ್ಥೆಯಲ್ಲಿ ವಿಜೃಂಭಣೆಯ ಕಾರ್ಗಿಲ್ ವಿಜಯ ದಿವಸ ಆಚರಣೆ

ಭಟ್ಕಳ: ಇಲ್ಲಿನ ಬೀನಾ ವೈದ್ಯ ಶಿಕ್ಷಣ ಸಂಸ್ಥೆಯಲ್ಲಿ ದಿನಾಂಕ 26-07-2026 ರಂದು ಕಾರ್ಗಿಲ್ ವಿಜಯ ದಿವಸವನ್ನು ಅತ್ಯಂತ ಗೌರವ, ದೇಶಭಕ್ತಿ ಹಾಗೂ ಹೆಮ್ಮೆಯ ಭಾವನೆಯೊಂದಿಗೆ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಬೀನಾ ವೈದ್ಯ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಟ್ರಸ್ಟಿ ಡಾ. ಪುಷ್ಪಲತಾ ಮಂಕಾಳ ವೈದ್ಯ ಅವರು ವೀರ ಯೋಧರ ಸ್ಮರಣಾರ್ಥ ಮೇಣದ ಬತ್ತಿಯನ್ನು ಬೆಳಗಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಕಾರ್ಗಿಲ್ ಯುದ್ಧದಲ್ಲಿ ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನು ಅರ್ಪಿಸಿದ ಅಮರ ವೀರ ಯೋಧರಿಗೆ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಪುಷ್ಪಲತಾ ಮಂಕಾಳ ವೈದ್ಯ ಅವರು, “ಕಾರ್ಗಿಲ್ ಯುದ್ಧದಲ್ಲಿ ನಮ್ಮ ಯೋಧರು ತೋರಿದ ಶೌರ್ಯ,ತ್ಯಾಗ ಹಾಗೂ ದೇಶಪ್ರೇಮ ಪ್ರತಿಯೊಬ್ಬ ಭಾರತೀಯನಿಗೂ ಸದಾ ಪ್ರೇರಣೆಯಾಗಿದೆ. ವಿದ್ಯಾರ್ಥಿಗಳು ದೇಶಭಕ್ತಿ, ಶಿಸ್ತು ಹಾಗೂ ಸೇವಾ ಮನೋಭಾವವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳನ್ನು ಹಾಡಿ, ಕಾರ್ಗಿಲ್ ವಿಜಯದ ಮಹತ್ವವನ್ನು ಸಾರುವ ಭಾಷಣಗಳನ್ನು ಮಾಡಿ, ವೀರ ಯೋಧರ ಸಾಹಸಗಾಥೆಯನ್ನು ಸ್ಮರಿಸಿದರು. ಶಿಕ್ಷಕರು ಕಾರ್ಗಿಲ್ ವಿಜಯ ದಿವಸದ ಇತಿಹಾಸ ಮತ್ತು ಅದರ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಯೋಧರಿಗೆ ಗೌರವ ನಮನ ಸಲ್ಲಿಸಿದರು. ಕಾರ್ಯಕ್ರಮವು ರಾಷ್ಟ್ರಗೀತೆಯೊಂದಿಗೆ ಸಮಾಪ್ತಿಗೊಂಡಿತು.

About The Author

error: Content is protected !!