August 22, 2026

ರೌಡಿ ಶೀಟರ್ ಜಗದೀಶ ಮೊಗೇರ ಉತ್ತರ ಕನ್ನಡ ಜಿಲ್ಲೆಯಿಂದ 6 ತಿಂಗಳು ಗಡಿಪಾರು!

ಭಟ್ಕಳ:  ನಿರಂತರ ರೌಡಿ ಚಟುವಟಿಕೆಗಳ ಮೂಲಕ ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆಗೆ ಭಂಗ ತರುತ್ತಿದ್ದ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಹೆಬಳೆ ಗಾಂಧಿನಗರ ನಿವಾಸಿ ಜಗದೀಶ ವಾಸು ಮೊಗೇರ (33) ಎಂಬಾತನನ್ನು ಉತ್ತರ ಕನ್ನಡ ಜಿಲ್ಲೆಯಿಂದ ಆರು ತಿಂಗಳ ಕಾಲ ಮೈಸೂರು ನಗರಕ್ಕೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.
ಆರೋಪಿ ಜಗದೀಶ ಮೊಗೇರ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಬಲವಂತ, ಹಲ್ಲೆ, ಕೊಲೆ ಯತ್ನ ಹಾಗೂ ಎಸ್‌ಸಿ/ಎಸ್‌ಟಿ (SC/ST) ದೌರ್ಜನ್ಯ ತಡೆ ಕಾಯ್ದೆಯಡಿ 5 ಪ್ರಕರಣಗಳು ಮತ್ತು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ಸೇರಿದಂತೆ ಒಟ್ಟು 6 ಗಂಭೀರ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಇವೆಲ್ಲವೂ ಪ್ರಸ್ತುತ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಂತಿವೆ.
ಆರೋಪಿಯು ತನ್ನ ಸಹಚರರೊಂದಿಗೆ ಸೇರಿಕೊಂಡು ಗೂಂಡಾಗಿರಿ ಮಾಡುವುದು, ಸಾರ್ವಜನಿಕರಿಗೆ ಬೆದರಿಕೆ ಹಾಕುವುದು, ಕ್ಷುಲ್ಲಕ ಕಾರಣಗಳಿಗೆ ಹಲ್ಲೆ ನಡೆಸುವುದು ಹಾಗೂ ನ್ಯಾಯಾಲಯದಲ್ಲಿರುವ ಪ್ರಕರಣಗಳ ಸಾಕ್ಷಿಗಳಿಗೆ ಬೆದರಿಕೆ ಒಡ್ಡುವ ಮೂಲಕ ಸಾರ್ವಜನಿಕ ಸುರಕ್ಷತೆಗೆ ಧಕ್ಕೆ ತರುತ್ತಿದ್ದ ಎಂದು ಪೊಲೀಸ್ ವರದಿಯಲ್ಲಿ ತಿಳಿಸಲಾಗಿದೆ.

ಮೈಸೂರಿನ ಅಶೋಕಪುರಂಗೆ ಗಡಿಪಾರು:

ಈತನ ಪುಂಡಾಟಿಕೆಗೆ ಕಡಿವಾಣ ಹಾಕಲು ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸ್ ನಿರೀಕ್ಷಕರು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ (SP) ಗಡಿಪಾರು ಪ್ರಸ್ತಾವನೆ ಸಲ್ಲಿಸಿದ್ದರು. ಪ್ರಸ್ತಾವನೆಯನ್ನು ಪರಿಶೀಲಿಸಿದ ಜಿಲ್ಲಾ ಪೊಲೀಸ್ ಅಧೀಕ್ಷಕರು, ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55(ಎ)(ಬಿ) ಅಡಿಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಆರೋಪಿಯನ್ನು 6 ತಿಂಗಳ ಕಾಲ ಮೈಸೂರು ನಗರದ ಅಶೋಕಪುರಂ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಿ ಆದೇಶಿಸಿದ್ದಾರೆ.
ಆದೇಶ ಹೊರಬೀಳುತ್ತಿದ್ದಂತೆಯೇ ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸರು ಆರೋಪಿ ಜಗದೀಶ ಮೊಗೇರನನ್ನು ವಶಕ್ಕೆ ಪಡೆದು, ಮೈಸೂರಿನ ಅಶೋಕಪುರಂ ಪೊಲೀಸ್ ಠಾಣೆಯ ಅಧಿಕಾರಿಗಳ ಮುಂದೆ ಹಾಜರುಪಡಿಸಿದ್ದಾರೆ.

About The Author

error: Content is protected !!