September 8, 2026

ವಿದ್ಯಾರ್ಥಿ ಗೌತಮ್ ಅನುಮಾನಾಸ್ಪದ ಸಾವು: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ

ರಾಯಬಾಗ: ತಾಲ್ಲೂಕಿನ ಸುಟ್ಟಟ್ಟಿ ಗ್ರಾಮದ ಮುರಾರ್ಜಿ ವಸತಿ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಅಲೆಮಾರಿ ಕೊರಮ ಸಮುದಾಯದ ವಿದ್ಯಾರ್ಥಿ ಗೌತಮ್ (15) ಅವರ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪರಿಶಿಷ್ಟ ಜಾತಿ–ಪರಿಶಿಷ್ಟ ಪಂಗಡ ಮಹಿಳಾ ಸಬಲೀಕರಣ ಹೋರಾಟ ಸಮಿತಿ ಒತ್ತಾಯಿಸಿದೆ.

ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ: ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷೆ ಡಾ. ಭೀಮಾ ಪುತ್ರಿ ನಾಗಮ್ಮ ಅವರ ನೇತೃತ್ವದ ನಿಯೋಗವು ನಿಡಗುಂದಿ ಗ್ರಾಮದಲ್ಲಿದ್ದ ಗೌತಮ್ ಅವರ ಮನೆಗೆ ಭೇಟಿ ನೀಡಿ, ಮೃತನ ತಾಯಿ ಲಕ್ಷ್ಮೀಬಾಯಿ ಅವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿತು.

ಆರೋಪಿಗಳ ಬಂಧನಕ್ಕೆ ಆಗ್ರಹ: ಘಟನೆ ನಡೆದು ದಿನಗಳು ಕಳೆದರೂ ಆರೋಪಿಗಳನ್ನು ಬಂಧಿಸದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮುಖಂಡರು, ಕುಡಚಿ ಸಿಪಿಐ ಅವರೊಂದಿಗೆ ಮಾತನಾಡಿ ಪ್ರಕರಣವನ್ನು ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಸೂಕ್ತವಾಗಿ ದಾಖಲಿಸಿ ತಕ್ಷಣವೇ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದರು.

ಅಧಿಕಾರಿಗಳು ಹಾಗೂ ಸಚಿವರ ಕಚೇರಿ ಸಂಪರ್ಕ: ಅಲೆಮಾರಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಮಾಜ ಕಲ್ಯಾಣ ಸಚಿವ ಕೆ.ಹೆಚ್. ಮುನಿಯಪ್ಪ ಅವರ ಆಪ್ತ ಕಾರ್ಯದರ್ಶಿಯವರೊಂದಿಗೆ ಮಾತನಾಡಿ, ಪ್ರಕರಣದ ಗಂಭೀರತೆಯನ್ನು ಮನವರಿಕೆ ಮಾಡಿಕೊಡಲಾಯಿತು. ಸಂತ್ರಸ್ತ ಕುಟುಂಬಕ್ಕೆ ಪರಿಹಾರ ದೊರಕಿಸಲು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲು ಕೋರಲಾಯಿತು.

ಹೋರಾಟದ ಎಚ್ಚರಿಕೆ: ಕರ್ತವ್ಯಲೋಪ ಎಸಗಿದವರ ವಿರುದ್ಧ ಸೂಕ್ತ ಕ್ರಮ ಜರುಗುವವರೆಗೆ ಮತ್ತು ಸಂತ್ರಸ್ತ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ಸಿಗುವವರೆಗೆ ವಿವಿಧ ಸಂಘಟನೆಗಳೊಂದಿಗೆ ಸೇರಿ ಹೋರಾಟ ನಡೆಸಲಾಗುವುದು ಎಂದು ಸಂಸ್ಥಾಪಕ ರಾಜ್ಯಾಧ್ಯಕ್ಷೆ ಎಚ್ಚರಿಸಿದ್ದಾರೆ.

    ಈ ಸಂದರ್ಭದಲ್ಲಿ ಬಾಗಲಕೋಟೆ ಜಿಲ್ಲಾ ಅಧ್ಯಕ್ಷೆ ದೀಪಾ ಭಜಂತ್ರಿ, ಧಾರವಾಡ ಜಿಲ್ಲಾ ಅಧ್ಯಕ್ಷೆ ಪದ್ಮ ಕೊರವರ್, ರಾಜ್ಯ ಉಪಾಧ್ಯಕ್ಷೆ ಅಂಜನ ರಮೇಶ್ ಭಜಂತ್ರಿ, ಕುಳುವ ಮಹಾಸಂಘದ ಬೆಳಗಾವಿ ಜಿಲ್ಲಾ ಅಧ್ಯಕ್ಷ ಮುತ್ತಪ್ಪ ಭಜಂತ್ರಿ ಹಾಗೂ ರಾಜ್ಯ ಮಾಧ್ಯಮ ವಕ್ತಾರ ಮಹೇಶ್ ಶರ್ಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

    About The Author

    error: Content is protected !!