October 22, 2026

ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ: ಕಾನೂನು ಸುವ್ಯವಸ್ಥೆ ಪಾಲನೆಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ

ಮಡಿಕೇರಿ: ಇತಿಹಾಸ ಪ್ರಸಿದ್ಧ ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಉತ್ಸವವನ್ನು ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆ ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಕೋರಿದ್ದಾರೆ.

ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದಸರಾ ಸಮಿತಿ ಪ್ರಮುಖರೊಂದಿಗೆ ನಡೆದ ಕಾನೂನು ಸುವ್ಯವಸ್ಥೆ ಹಾಗೂ ಸಿದ್ಧತಾ ಪರಿಶೀಲನಾ ಸಭೆಯಲ್ಲಿ ಈ ಕುರಿತು ಪ್ರಮುಖ ಮಾರ್ಗದರ್ಶನಗಳನ್ನು ನೀಡಲಾಯಿತು.

ಸಭೆಯ ಪ್ರಮುಖ ನಿರ್ಧಾರಗಳು ಹಾಗೂ ಸೂಚನೆಗಳು:

ಸಿಸಿಟಿವಿ ಹಾಗೂ ಭದ್ರತೆ: ಮಡಿಕೇರಿಯಲ್ಲಿ 27 ಹಾಗೂ ಗೋಣಿಕೊಪ್ಪದಲ್ಲಿ 15 ಪ್ರಮುಖ ಸ್ಥಳಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕೆಮೆರಾಗಳನ್ನು ಅಳವಡಿಸಬೇಕು. ವಾಹನ ನಿಲುಗಡೆ (ಪಾರ್ಕಿಂಗ್) ಸ್ಥಳಗಳಲ್ಲಿ ಸೂಕ್ತ ಬೆಳಕಿನ ವ್ಯವಸ್ಥೆ ಮಾಡಬೇಕು.

ಸಂಚಾರ ಹಾಗೂ ಪಾರ್ಕಿಂಗ್ ವ್ಯವಸ್ಥೆ: ವಿರಾಜಪೇಟೆ ಮಾರ್ಗವಾಗಿ ಮಡಿಕೇರಿಗೆ ಬರುವ ವಾಹನಗಳಿಗೆ ಮೇಕೇರಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುವುದು. ಮೇಕೇರಿಯಿಂದ ಜನರಲ್ ತಿಮ್ಮಯ್ಯ ವೃತ್ತದವರೆಗೆ ಪ್ರಯಾಣಿಕರ ಅನುಕೂಲಕ್ಕೆ ಬದಲಿ ವಾಹನ ವ್ಯವಸ್ಥೆ ಕಲ್ಪಿಸಲಾಗುವುದು.

ಮದ್ಯ ಮಾರಾಟ ಹಾಗೂ ಮದ್ಯಪಾನ ನಿಷೇಧ: ದಸರಾ ಸಮಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡುವುದು ಕಂಡುಬಂದಲ್ಲಿ ಕಟ್ಟುನಿಟ್ಟಿನ ಪ್ರಕರಣ ದಾಖಲಿಸಲು ಅಬಕಾರಿ ಇಲಾಖೆಗೆ ಸೂಚಿಸಲಾಗಿದೆ.

ತುರ್ತು ಸೇವೆಗಳು: ಆರೋಗ್ಯ ಇಲಾಖೆಯಿಂದ ಹೆಚ್ಚಿನ ಆಂಬ್ಯುಲೆನ್ಸ್ ಹಾಗೂ ವೈದ್ಯಕೀಯ ಸಿಬ್ಬಂದಿ ನಿಯೋಜನೆ, ಕೆಎಸ್‌ಆರ್‌ಟಿಸಿಯಿಂದ ಹೆಚ್ಚುವರಿ ಬಸ್ ಸೌಲಭ್ಯ, ಚೆಕ್‌ಪೋಸ್ಟ್‌ಗಳಲ್ಲಿ ಸಹಾಯವಾಣಿ ಕೇಂದ್ರಗಳು ಹಾಗೂ ಟೆಂಟ್ ವ್ಯವಸ್ಥೆ ಮಾಡಲಾಗುವುದು.

ಇತರ ಇಲಾಖೆಗಳು: ಕ್ರೀಡಾಂಗಣ ಜಾಗ ಕಾಯ್ದಿರಿಸುವಿಕೆ, ಸುಗಮ ವಿದ್ಯುತ್ ಪೂರೈಕೆಗೆ ಸೆಸ್ಕ್‌ನಿಂದ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಹಾಗೂ ಮರದ ಕೊಂಬೆಗಳ ತೆರವಿಗೆ ಅರಣ್ಯ ಇಲಾಖೆಗೆ ನಿರ್ದೇಶನ ನೀಡಲಾಗಿದೆ. ಪ್ರವಾಸಿ ತಾಣಗಳಲ್ಲಿ ಲೋಹ ಶೋಧಕ (DFMD) ಅಳವಡಿಸಲಾಗುವುದು.

    ಸಾರ್ವಜನಿಕರು ಹಾಗೂ ಉತ್ಸವ ಸಮಿತಿಯವರು ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಡಳಿತ ವಿನಂತಿಸಿದೆ.

    ವರದಿ: ಪ್ರಿತುನ್ ಪೂವಣ್ಣ

    About The Author

    error: Content is protected !!