
ಮಡಿಕೇರಿ ನಗರದಲ್ಲಿ ₹೯೦ ಕೋಟಿ ವೆಚ್ಚದಲ್ಲಿ ಭೂಗತ ಕೇಬಲ್ ಅಳವಡಿಕೆ ಯೋಜನೆ: ಶಾಸಕರ ಅಭಯ
ಸೋಮವಾರಪೇಟೆ: ತಾಲೂಕಿನ ಶಾಂತಳ್ಳಿ ಗ್ರಾಮದಲ್ಲಿ ₹೮೦ ಲಕ್ಷ ಅಂದಾಜು ವೆಚ್ಚದಲ್ಲಿ ನಿರ್ಮಾಣವಾಗಲಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ (ಸೆಸ್ಕ್) ನೂತನ ಸೆಕ್ಷನ್ ಕಚೇರಿ ಕಟ್ಟಡ ಕಾಮಗಾರಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಭೂಮಿಪೂಜೆ ನೆರವೇರಿಸಿದರು.


ಗ್ರಾಮಸ್ಥರ ಸಮ್ಮುಖದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, “ಶಾಂತಳ್ಳಿಯಲ್ಲಿ ಸೆಸ್ಕ್ ಸೆಕ್ಷನ್ ಕಚೇರಿ ನಿರ್ಮಾಣ ಮಾಡುವುದು ಗ್ರಾಮೀಣ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿತ್ತು. ಸಾರ್ವಜನಿಕರ ಆಶಯಕ್ಕೆ ಸ್ಪಂದಿಸಿ ಈ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಕಚೇರಿಯನ್ನು ಅತ್ಯಂತ ಗುಣಮಟ್ಟದಿಂದ ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದರು.

ನಿರಂತರ ವಿದ್ಯುತ್ ಪೂರೈಕೆಗೆ ಕ್ರಮ: “ಗ್ರಾಮೀಣ ಪ್ರದೇಶಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸುವುದು ನನ್ನ ಮೊದಲ ಆದ್ಯತೆ. ಕೊಡಗು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ವಿದ್ಯುತ್ ಮಾರ್ಗಗಳನ್ನು ವೈಜ್ಞಾನಿಕವಾಗಿ ಉನ್ನತೀಕರಿಸಲಾಗುತ್ತಿದೆ. ಮಡಿಕೇರಿ ನಗರ ವ್ಯಾಪ್ತಿಯಲ್ಲಿ ₹೯೦ ಕೋಟಿ ವೆಚ್ಚದಲ್ಲಿ ಭೂಗತ ವಿದ್ಯುತ್ ಕೇಬಲ್ ಅಳವಡಿಸುವ ಬೃಹತ್ ಯೋಜನೆ ರೂಪಿಸಲಾಗಿದೆ” ಎಂದು ಶಾಸಕರು ಮಾಹಿತಿ ನೀಡಿದರು.
ಗ್ರಾಮೀಣ ಭಾಗಗಳಲ್ಲಿ ಎದುರಾಗುತ್ತಿರುವ ವಿದ್ಯುತ್ ವ್ಯತ್ಯಯ ಹಾಗೂ ತಾಂತ್ರಿಕ ಸಮಸ್ಯೆಗಳನ್ನು ಹಂತ ಹಂತವಾಗಿ ಸರಿಪಡಿಸಿ, ಜನರಿಗೆ ಗುಣಮಟ್ಟದ ಹಾಗೂ ನಿರಂತರ ವಿದ್ಯುತ್ ಪೂರೈಸಲು ಬದ್ಧರಾಗಿರುವುದಾಗಿ ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಸೆಸ್ಕ್ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. (ವರದಿ: ಪ್ರಿತುನ್ ಪೂವಣ್ಣ)

More Stories
ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅವರಿಗೆ ಅಹಿಂದ ಬಳಗದಿಂದ ಸನ್ಮಾನ
ವಾಲ್ಮೀಕಿ ಜಯಂತಿ ಬಹಿಷ್ಕಾರ ಹಾಗೂ ಅಧಿಕಾರಿಗಳ ಗೈರಿಗೆ ಆಕ್ರೋಶ; ಕರವೇ ಸ್ವಾಭಿಮಾನಿ ಸೇನೆಯಿಂದ ಕಠಿಣ ಕ್ರಮಕ್ಕೆ ಆಗ್ರಹ
ರಾಜ್ಯಮಟ್ಟದ ಮಿಕ್ಸ್ ಬಾಕ್ಸಿಂಗ್ನಲ್ಲಿ ಸಾಧನೆ; ಬೆಳ್ಳಿ ಪದಕ ಗೆದ್ದ ಸಹೋದರರು