November 23, 2026

ಹಡಿನಬಾಳ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ: ಕೃಷ್ಣಮೂರ್ತಿ ಹೆಬ್ಬಾರ್ ಉದ್ಘಾಟನೆ

ಮಾತೃಭಾಷೆಯ ಮೂಲಕ ಸಮೃದ್ಧ ಬದುಕು ಕಟ್ಟಿಕೊಳ್ಳಲು ಸಾಧ್ಯ: ಹಿರಿಯ ಪತ್ರಕರ್ತ ಕೃಷ್ಣಮೂರ್ತಿ ಹೆಬ್ಬಾರ್ ನುಡಿ

ಹೊನ್ನಾವರ (ಹಡಿನಬಾಳ): ಹಡಿನಬಾಳದ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭವು ರವಿವಾರ (ನ.೧) ಅತ್ಯಂತ ವಿಜೃಂಭಣೆಯಿಂದ ಜರುಗಿತು.

ಹೊನ್ನಾವರದ ‘ನಾಗರಿಕ’ ವಾರಪತ್ರಿಕೆಯ ಸಂಪಾದಕ ಕೃಷ್ಣಮೂರ್ತಿ ಹೆಬ್ಬಾರ್ ಕಾರ್ಯಕ್ರಮ ಉದ್ಘಾಟಿಸಿ, ‘ಮಾತೃಭಾಷೆಯ ಮೂಲಕ ಬದುಕು ಕಟ್ಟಿಕೊಳ್ಳುವುದು ಹೇಗೆ?’ ಎಂಬ ವಿಷಯದ ಕುರಿತು ತಮ್ಮ ಜೀವನಾನುಭವದ ನುಡಿಗಳೊಂದಿಗೆ ಶೈಕ್ಷಣಿಕ ಉಪನ್ಯಾಸ ನೀಡಿದರು. ಬಳಿಕ ನಡೆದ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಹಲವಾರು ಪ್ರಶ್ನೆಗಳಿಗೆ ಉತ್ತರಿಸಿ, ಅವರ ಸಂದೇಹಗಳನ್ನು ಪರಿಹರಿಸಿದರು. ಇದೇ ಸಂದರ್ಭದಲ್ಲಿ ಕೃಷ್ಣಮೂರ್ತಿ ಹೆಬ್ಬಾರ್ ಅವರನ್ನು ಶಾಲೆಯ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಬಹುಮಾನ ವಿತರಣೆ: ಕಳೆದ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಕುಮಾರಿ ದೀಕ್ಷಾ ನಾಯ್ಕ ಇವಳನ್ನು ವೇದಿಕೆಯಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. ರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕನ್ನಡ ನಾಡಿನ ಇತಿಹಾಸ ಅರಿಯುವುದು ಅಗತ್ಯ: ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಮುಖ್ಯಾಧ್ಯಾಪಕಿ ಜ್ಯೋತಿ ಭಂಡಾರಿ, “ಕರ್ನಾಟಕದ ಸುದೀರ್ಘ ಇತಿಹಾಸ ಹಾಗೂ ದಿನನಿತ್ಯದ ಬದುಕಿನಲ್ಲಿ ಮಾತೃಭಾಷೆಯ ಅಗತ್ಯತೆಯ ಕುರಿತು ವಿದ್ಯಾರ್ಥಿಗಳು ಅರಿವು ಬೆಳೆಸಿಕೊಳ್ಳಬೇಕು” ಎಂದರು.

ಸಮಾರಂಭದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ವೆಂಕಟೇಶ ಪ್ರಭು, ಸದಸ್ಯ ಗಣಪತಿ ಗೌಡ, ಪಾಲಕರು, ಪೋಷಕರು, ಹಳೆಯ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಂದನಾ ನಾಯ್ಕ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಕನ್ನಡ ಸಂಘದ ಸಂಚಾಲಕ, ಶಿಕ್ಷಕ ವಿಷ್ಣು ನಾಯ್ಕ ಸ್ವಾಗತಿಸಿ, ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ವಿಶ್ವನಾಥ ಗೌಡ ಕಾರ್ಯಕ್ರಮ ನಿರೂಪಿಸಿದರು.

About The Author

error: Content is protected !!