ಬೇಂಗ್ರೆಯಲ್ಲಿ ಪ್ರಜಾಸೇವಾ ಆಂದೋಲನ: ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 73 ಅರ್ಜಿ ಸ್ವೀಕಾರ
ಭಟ್ಕಳ: ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ದುಸ್ಥಿತಿಗೆ ತೆರೆ ಎಳೆದು, ಆಡಳಿತವನ್ನೇ ಜನರ ಮನೆಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ‘ಪ್ರಜಾಸೇವಾ ಆಂದೋಲನ’ ರೂಪಿಸಲಾಗಿದೆ. ಸಲ್ಲಿಕೆಯಾಗುವ ಅಹವಾಲುಗಳನ್ನು ಗರಿಷ್ಠ 15 ದಿನಗಳೊಳಗೆ ಇತ್ಯರ್ಥಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಸಭೆಯ ಉಪಸಭಾಧ್ಯಕ್ಷ ಹಾಗೂ ಶಾಸಕ ಮಂಕಾಳ ಎಸ್. ವೈದ್ಯ ತಿಳಿಸಿದರು.


ತಾಲೂಕಿನ ಮಾವಳ್ಳಿ ಹೋಬಳಿಯ ಬೇಂಗ್ರೆ 1ರ ಶ್ರೀ ಮಂಜುನಾಥ್ ರಾಯಲ್ ಕನ್ವೆನ್ಷನ್ ಹಾಲ್ನಲ್ಲಿ ಶನಿವಾರ ಆಯೋಜಿಸಲಾಗಿದ್ದ ‘ಪ್ರಜಾಸೇವಾ ಆಂದೋಲನ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅರ್ಜಿಗಳ ಸ್ಥಿತಿಗತಿ ಪಾರದರ್ಶಕ: “ಸಾರ್ವಜನಿಕರು ಸಲ್ಲಿಸಿದ ಅರ್ಜಿಗಳ ಪ್ರಸ್ತುತ ಸ್ಥಿತಿಗತಿಯ ಮಾಹಿತಿಯನ್ನು ಅರ್ಜಿದಾರರಿಗೇ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ತಕ್ಷಣ ಬಗೆಹರಿಸಬಹುದಾದ ಸಮಸ್ಯೆಗಳನ್ನು ಸ್ಥಳದಲ್ಲೇ ವಿಲೇವಾರಿ ಮಾಡಲಾಗುವುದು. ತಾಲೂಕು ಅಥವಾ ಜಿಲ್ಲಾ ಮಟ್ಟದಲ್ಲಿ ಪರಿಹಾರವಾಗದ ವಿಷಯಗಳನ್ನು ರಾಜ್ಯಮಟ್ಟಕ್ಕೆ ಕೊಂಡೊಯ್ದು ಬಗೆಹರಿಸಲಾಗುವುದು. ಒಂದು ವೇಳೆ ಅರ್ಜಿ ಪುರಸ್ಕರಿಸಲು ಸಾಧ್ಯವಾಗದಿದ್ದರೆ ಅದಕ್ಕೆ ಸೂಕ್ತ ಕಾರಣವನ್ನು ಅಧಿಕಾರಿಗಳು ಸ್ಪಷ್ಟಪಡಿಸಬೇಕು” ಎಂದು ಉಪಸಭಾಧ್ಯಕ್ಷರು ಸೂಚನೆ ನೀಡಿದರು.








ಫಲಾನುಭವಿಗಳಿಗೆ ವಿವಿಧ ಸೌಲಭ್ಯ ವಿತರಣೆ: ಸಮಾವೇಶದಲ್ಲಿ ಪೌತಿ ಆಂದೋಲನದಡಿ ಸಿದ್ಧಪಡಿಸಲಾದ ಪಹಣಿ ಪತ್ರಗಳು ಹಾಗೂ ಪಿಂಚಣಿ ಮಂಜೂರಾತಿ ಆದೇಶ ಪತ್ರಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು. ಅಲ್ಲದೆ, ಮೀನುಗಾರರಿಗೆ ಲೈಫ್ ಜಾಕೆಟ್, ಪಶುಸಂಗೋಪನಾ ಇಲಾಖೆಯಿಂದ ಗೋಮೇವಿನ ಸೌಲಭ್ಯ ಹಾಗೂ ಕಾರ್ಮಿಕ ಇಲಾಖೆಯಿಂದ ಹೆರಿಗೆ ಸೌಲಭ್ಯಕ್ಕೆ ಸಂಬಂಧಿಸಿದ ಬಾಂಡ್ಗಳನ್ನು ನೂತನ ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು.
ಕಾರ್ಯಕ್ರಮದಲ್ಲಿ ಕಂದಾಯ, ಪಂಚಾಯತ್ ರಾಜ್, ಹೆಸ್ಕಾಂ, ಅರಣ್ಯ ಹಾಗೂ ಆಹಾರ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಒಟ್ಟು 73 ಅರ್ಜಿಗಳು ಸ್ವೀಕೃತಗೊಂಡವು.








ತಹಶೀಲ್ದಾರ್ ಉಷಾ ಪಾವಸ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ সহಾಯಕ ಆಯುಕ್ತ ಜೆ. ಮಹೇಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಜನಾರ್ದನ ದೇವಾಡಿಗ, ಡಿವೈಎಸ್ಪಿ ಗಿರೀಶ್ ಎಸ್.ವಿ., ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ರಾಜು ನಾಯ್ಕ ಉಪಸ್ಥಿತರಿದ್ದರು. ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ್ ಎಂ. ವಂದಿಸಿದರು.

More Stories
ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾಭಾರತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಮಿಂಚು
ಜಾಲಿಯಲ್ಲಿ ಬೆಳಕೆ ವಲಯ ಮಟ್ಟದ ಪ್ರತಿಭಾ ಕಾರಂಜಿ ಸಂಭ್ರಮ
ನ್ಯಾಯಾಲಯದ ವಾರಂಟ್ ಜಾರಿಗೊಳಿಸಲು ತೆರಳಿದ್ದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಆರೋಪಿ ಪರಾರಿ!