ಹಾಲು, ಮೊಸರು, ತುಪ್ಪ ಹಾಗೂ ಬಸ್ ದರ ಹೆಚ್ಚಳ: ಹಬ್ಬದ ಸಂಭ್ರಮ ಕಸಿದ ಸರ್ಕಾರ ಎಂದ ಮಾಜಿ ಸ್ಪೀಕರ್
ಭಟ್ಕಳ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಜನಸಾಮಾನ್ಯರ ಮೇಲೆ ನಿರಂತರವಾಗಿ ಬೆಲೆ ಏರಿಕೆಯ ಹೊರೆ ಹೊರಿಸುವ ಮೂಲಕ ದೀಪಾವಳಿ ಹಬ್ಬದ ಸಂಭ್ರಮವನ್ನೇ ಕಸಿದುಕೊಂಡಿದೆ ಎಂದು ಮಾಜಿ ವಿಧಾನಸಭಾಧ್ಯಕ್ಷ ಹಾಗೂ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.


ಭಟ್ಕಳದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಹಾಲು, ಮೊಸರು, ತುಪ್ಪ ಹಾಗೂ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಮೂಲಕ ಜನರ ಜೇಬಿಗೆ ಕತ್ತರಿ ಹಾಕಲಾಗಿದೆ. ಈ ಬೆಲೆ ಏರಿಕೆಯೇ ಹಿಂದೂಗಳಿಗೆ ಕಾಂಗ್ರೆಸ್ ಸರ್ಕಾರ ನೀಡಿದ ದೀಪಾವಳಿ ಉಡುಗೊರೆ” ಎಂದು ವ್ಯಂಗ್ಯವಾಡಿದರು.

ಆರ್ಥಿಕ ವೈಫಲ್ಯ ಹಾಗೂ ಯೋಜನೆಗಳಿಗೆ ಅನುದಾನ ಕೊರತೆ: ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರ ಬಳಿ ಅನುದಾನವಿಲ್ಲ. ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆ ವಿಷಯದಲ್ಲೂ ಜನರನ್ನು ಗೊಂದಲದಲ್ಲಿಡಲಾಗಿದೆ. ಕರಾವಳಿಯಲ್ಲಿ ಸಂಪುಟ ಸಭೆ ನಡೆಸಿ ಅನುದಾನ ಘೋಷಿಸಿದ ಬೆನ್ನಲ್ಲೇ, ಹೊಸ ಯೋಜನೆಗಳಿಗೆ ಹಣ ಬಿಡುಗಡೆ ಮಾಡದಂತೆ ಆರ್ಥಿಕ ಇಲಾಖೆಗೆ ನಿರ್ದೇಶನ ನೀಡಿರುವುದು ಸರ್ಕಾರದ ವೈರುಧ್ಯ ಹಾಗೂ ಆರ್ಥಿಕ ನಿರ್ವಹಣೆಯ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು.






ಎಸ್‌ಐಆರ್ ಹಾಗೂ ಇವಿಎಂ ವಿಚಾರದಲ್ಲಿ ಕಾಂಗ್ರೆಸ್ ದ್ವಂದ್ವ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಕುರಿತು ಕಾಂಗ್ರೆಸ್ ನಾಯಕರು ಅನಗತ್ಯ ಗೊಂದಲ ಹಾಗೂ ಆತಂಕ ಸೃಷ್ಟಿಸುತ್ತಿದ್ದಾರೆ. ಇವಿಎಂ ಯಂತ್ರಗಳ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅದೇ ಇವಿಎಂ ಮೂಲಕ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದಕ್ಕೆ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದ ಕಾಗೇರಿ, ಡಿ.ಕೆ. ಶಿವಕುಮಾರ್ ಅವರು ತಕ್ಷಣ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.





ಸುದ್ದಿಗೋಷ್ಠಿ ಹಾಗೂ ಭೇಟಿಯ ಸಂದರ್ಭದಲ್ಲಿ ಪ್ರಮುಖರಾದ ಗೋವಿಂದ ನಾಯ್ಕ, ಲಕ್ಷ್ಮೀನಾರಾಯಣ ನಾಯ್ಕ, ಶ್ರೀಕಾಂತ ನಾಯ್ಕ, ಈಶ್ವರ ಎನ್. ನಾಯ್ಕ, ಸುಬ್ರಾಯ ದೇವಡಿಗ, ಕೇದಾರ ಕೊಲ್ಲೆ, ರವಿ ನಾಯ್ಕ ಜಾಲಿ ಹಾಗೂ ಶಿವಾನಿ ಶಾಂತಾರಾಮ ಉಪಸ್ಥಿತರಿದ್ದರು.







More Stories
ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾಭಾರತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಮಿಂಚು
ಜಾಲಿಯಲ್ಲಿ ಬೆಳಕೆ ವಲಯ ಮಟ್ಟದ ಪ್ರತಿಭಾ ಕಾರಂಜಿ ಸಂಭ್ರಮ
ನ್ಯಾಯಾಲಯದ ವಾರಂಟ್ ಜಾರಿಗೊಳಿಸಲು ತೆರಳಿದ್ದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಆರೋಪಿ ಪರಾರಿ!