ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದಲ್ಲಿ ಸಂಭ್ರಮಾಚರಣೆ; ಪ್ರವಾಸೋದ್ಯಮ, ವ್ಯಾಪಾರ ಬೆಳವಣಿಗೆಗೆ ಹೊಸ ಅವಕಾಶ

ಭಟ್ಕಳ (ಉತ್ತರ ಕನ್ನಡ): ಕರಾವಳಿ ಭಾಗದ ರೈಲ್ವೆ ಸಂಪರ್ಕ ವ್ಯವಸ್ಥೆಗೆ ಹೊಸ ವೇಗ ನೀಡಿರುವ ಬೆಂಗಳೂರು–ಮಂಗಳೂರು–ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಮುರುಡೇಶ್ವರ ರೈಲು ನಿಲ್ದಾಣದಲ್ಲಿ ಬಿಜೆಪಿ ಮಂಡಲದ ವತಿಯಿಂದ ಅದ್ದೂರಿ ಸ್ವಾಗತ ಕೋರಲಾಯಿತು.

ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನೇತೃತ್ವದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ, ರೈಲು ನಿಲ್ದಾಣಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಆಗಮಿಸುತ್ತಿದ್ದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹರ್ಷೋದ್ಗಾರಗಳೊಂದಿಗೆ ಪುಷ್ಪಾರ್ಚನೆಗೈದು ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, “ದೇಶದ ರೈಲ್ವೆ ವ್ಯವಸ್ಥೆಯಲ್ಲಿ ಆಧುನಿಕ ತಂತ್ರಜ್ಞಾನ ಮತ್ತು ವೇಗದ ಪ್ರಯಾಣಕ್ಕೆ ಆದ್ಯತೆ ನೀಡಲಾಗುತ್ತಿದ್ದು, ವಂದೇ ಭಾರತ್ ರೈಲು ಇದಕ್ಕೆ ಸಾಕ್ಷಿಯಾಗಿದೆ. ಬೆಂಗಳೂರು, ಮಂಗಳೂರು ಹಾಗೂ ಗೋವಾದ ಮಡಗಾಂವ್ ನಡುವಿನ ಸಂಪರ್ಕವನ್ನು ಮತ್ತಷ್ಟು ಸುಗಮಗೊಳಿಸುವ ಈ ರೈಲು ಸೇವೆಯು ಕರಾವಳಿ ಭಾಗದ ಪ್ರಯಾಣಿಕರಿಗೆ ದೊಡ್ಡ ವರದಾನವಾಗಿದೆ” ಎಂದರು.
ಪ್ರವಾಸೋದ್ಯಮ ಮತ್ತು ಆರ್ಥಿಕತೆಗೆ ಉತ್ತೇಜನ: ಪ್ರಾಕೃತಿಕ ಸೌಂದರ್ಯ ಹಾಗೂ ಧಾರ್ಮಿಕ ಕ್ಷೇತ್ರಗಳಿಂದ ಗಮನ ಸೆಳೆಯುತ್ತಿರುವ ಉತ್ತರ ಕನ್ನಡ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣ ಮುರುಡೇಶ್ವರಕ್ಕೆ ವಂದೇ ಭಾರತ್ ರೈಲು ಸಂಪರ್ಕ ದೊರೆತಿರುವುದು ಪ್ರವಾಸೋದ್ಯಮದ ಬೆಳವಣಿಗೆಗೆ ಪೂರಕವಾಗಲಿದೆ. ಬೆಂಗಳೂರು ಮತ್ತು ಮಂಗಳೂರಿನಿಂದ ಗೋವಾ ಕಡೆಗೆ ಸಂಚರಿಸುವ ಪ್ರಯಾಣಿಕರ ಸಮಯ ಉಳಿತಾಯವಾಗುವುದರ ಜೊತೆಗೆ, ಜಿಲ್ಲೆಯ ವ್ಯಾಪಾರ-ವಹಿವಾಟು, ಉದ್ಯೋಗ ಹಾಗೂ ಸ್ಥಳೀಯ ಆರ್ಥಿಕ ಚಟುವಟಿಕೆಗಳಿಗೆ ಹೊಸ ಚೈತನ್ಯ ದೊರೆಯಲಿದೆ ಎಂದು ಅಭಿಪ್ರಾಯಪಡಲಾಯಿತು.
ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲದ ಪ್ರಮುಖರು, ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸ್ಥಳೀಯ ಸಾರ್ವಜನಿಕರು ಪಾಲ್ಗೊಂಡು ಸಂಭ್ರಮಿಸಿದರು.

More Stories
ಮುರುಡೇಶ್ವರ: ತಾಲೂಕು ಮಟ್ಟದ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಗಳು ಯಶಸ್ವಿ
ಮುರುಡೇಶ್ವರ: ಬೀನಾ ವೈದ್ಯ ಪದವಿ ಕಾಲೇಜಿಗೆ ‘ಯುನಿವರ್ಸಿಟಿ ಬ್ಲೂ’ ಗೌರವ; ಕವಿವಿ ಕ್ರಿಕೆಟ್ ತಂಡಕ್ಕೆ ಅರ್ಸಲಾನ್ ಆಯ್ಕೆ
ಕಡಲ ಅಲೆಗಳ ನಡುವೆ ಕಂಗೊಳಿಸಿದ ಆರತಿಯ ಬೆಳಕು; ಮುರುಡೇಶ್ವರದಲ್ಲಿ ಭಕ್ತಿಸಾಗರ