ಬೆಳಕೆಯಲ್ಲಿ ನಡೆದ ಪ್ರಜಾಸೇವಾ ಆಂದೋಲನದಲ್ಲಿ 85ಕ್ಕೂ ಹೆಚ್ಚು ಅಹವಾಲು ಸ್ವೀಕಾರ; ಜಿಲ್ಲಾಧಿಕಾರಿ ಹರ್ಷಲ್ ಬೊಯರ್ ಸೇರಿ ಹಿರಿಯ ಅಧಿಕಾರಿಗಳು ಭಾಗಿ
ಭಟ್ಕಳ (ಉತ್ತರ ಕನ್ನಡ): ಪ್ರಜಾಸೇವಾ ಆಂದೋಲನದಲ್ಲಿ ಸಾರ್ವಜನಿಕರಿಂದ ಸ್ವೀಕರಿಸಲಾಗುವ ಪ್ರತಿಯೊಂದು ಅರ್ಜಿಯನ್ನೂ ಕಾನೂನುಬದ್ಧವಾಗಿ ಪರಿಶೀಲಿಸಿ ವಿಲೇವಾರಿ ಮಾಡಲಾಗುವುದು. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಎಲ್ಲಾ ಅಹವಾಲುಗಳಿಗೆ ಸಮರ್ಪಕವಾಗಿ ಸ್ಪಂದಿಸಲಿದ್ದಾರೆ ಎಂದು ವಿಧಾನಸಭೆ ಉಪಾಧ್ಯಕ್ಷ ಹಾಗೂ ಭಟ್ಕಳ-ಹೊನ್ನಾವರ ಕ್ಷೇತ್ರದ ಶಾಸಕ ಮಂಕಾಳ ಎಸ್. ವೈದ್ಯ ಭರವಸೆ ನೀಡಿದರು.

ತಾಲೂಕಿನ ಬೆಳಕೆ ಹೋಬಳಿಯ ಬೊಮ್ಮನಕೇರಿ ದೇವಸ್ಥಾನದ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಭಟ್ಕಳ ನಗರಸಭೆ ಹಾಗೂ ಜಾಲಿ ಪಟ್ಟಣ ಪಂಚಾಯಿತಿಯ ಸಂಯುಕ್ತಾಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ‘ಪ್ರಜಾಸೇವಾ ಆಂದೋಲನ’ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು.


“ಸರ್ಕಾರಿ ಕೆಲಸಗಳಿಗಾಗಿ ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಮುಖ್ಯಮಂತ್ರಿಗಳ ಆಶಯದಂತೆ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಎಂಬ ಧ್ಯೇಯವಾಕ್ಯದಡಿ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಆಂದೋಲನ ಹಮ್ಮಿಕೊಳ್ಳಲಾಗುತ್ತಿದೆ. ಇದು ಕೇವಲ ಔಪಚಾರಿಕ ಸಭೆಯಲ್ಲ; ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿರಂತರ ಪ್ರಯತ್ನವಾಗಿದೆ” ಎಂದರು.
ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ: “ಸಾರ್ವಜನಿಕರ ಮನವಿಗಳನ್ನು ನಿರ್ಲಕ್ಷಿಸದೆ, ಪ್ರತಿಯೊಂದು ಅರ್ಜಿಯನ್ನೂ ಪರಿಶೀಲಿಸಿ ಅಧಿಕಾರಿಗಳು ಉತ್ತರ ನೀಡಬೇಕು. ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆಗಾಗಿ ಪ್ರತ್ಯೇಕ ಇಲಾಖೆಯನ್ನೇ ಸೃಜಿಸಲಾಗಿದ್ದು, ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು” ಎಂದು ಸೂಚಿಸಿದರು. ಅಲ್ಲದೆ, ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಗಾಗಿ ಈಗಾಗಲೇ ಪ್ರತಿ ತಾಲೂಕಿಗೆ ₹1 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಜಾನುವಾರುಗಳಿಗೆ ಮೇವಿನ ಕಿಟ್ ವಿತರಣೆ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
85ಕ್ಕೂ ಹೆಚ್ಚು ಅರ್ಜಿಗಳ ಸ್ವೀಕಾರ: ಸಭೆಯಲ್ಲಿ ಕುಡಿಯುವ ನೀರು, ರಸ್ತೆ, ಪೌತಿ ಖಾತೆ, ನಿವೇಶನ, ಅರಣ್ಯ ಭೂಮಿ, ವಸತಿ ಸಮಸ್ಯೆ, ಮೊಗೇರ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆಗೊಳಿಸುವುದು ಹಾಗೂ ಸಿಂಧುತ್ವ ಪ್ರಮಾಣಪತ್ರ ವಿತರಣೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 85ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಲಾಯಿತು. ಎಲ್ಲಾ ಅರ್ಜಿಗಳನ್ನು 15 ದಿನಗಳೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಗಡುವು ನೀಡಲಾಯಿತು.
ಗಣ್ಯರು ಹಾಗೂ ಅಧಿಕಾರಿಗಳ ಉಪಸ್ಥಿತಿ: ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಹರ್ಷಲ್ ಬೊಯರ್, ಜಿ.ಪಂ. ಸಿಇಒ ಡಾ. ದಿಲೀಷ್ ಶಶಿ, ಡಿಸಿಎಫ್ ಯೋಗೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಉಪವಿಭಾಗಾಧಿಕಾರಿ ಮಹೇಶ್, ತಾ.ಪಂ. ಇಒ ಸುನೀಲ್, ತಹಶೀಲ್ದಾರ್ ಉಷಾ ಎಸ್. ಪಾವಸ್ಕರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಜನಾರ್ದನ ದೇವಾಡಿಗ, ತಾಲೂಕು ಅಧ್ಯಕ್ಷ ರಾಜು ನಾಯ್ಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

More Stories
ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾಭಾರತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಮಿಂಚು
ಜಾಲಿಯಲ್ಲಿ ಬೆಳಕೆ ವಲಯ ಮಟ್ಟದ ಪ್ರತಿಭಾ ಕಾರಂಜಿ ಸಂಭ್ರಮ
ನ್ಯಾಯಾಲಯದ ವಾರಂಟ್ ಜಾರಿಗೊಳಿಸಲು ತೆರಳಿದ್ದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಆರೋಪಿ ಪರಾರಿ!