November 22, 2026

ಚೇರಂಬಾಣೆ ಕ್ಲಸ್ಟರ್ ಮಟ್ಟದ ‘ಪ್ರತಿಭಾ ಕಾರಂಜಿ’ ಕಾರ್ಯಕ್ರಮ

ವಿದ್ಯಾರ್ಥಿಗಳ ಸುಪ್ತ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆ; ವಿವಿಧ ಸ್ಪರ್ಧೆಗಳಲ್ಲಿ ಮಕ್ಕಳ ಉತ್ಸಾಹದ ಭಾಗಿ

ಭಾಗಮಂಡಲ (ಕೊಡಗು): ಚೇರಂಬಾಣೆ ಕ್ಲಸ್ಟರ್ ಮಟ್ಟದ ‘ಪ್ರತಿಭಾ ಕಾರಂಜಿ’ ಕಾರ್ಯಕ್ರಮವು ಬೆಟ್ಟಗೇರಿಯ ಉದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಶಸ್ವಿಯಾಗಿ ಜರುಗಿತು.

ಪ್ರಾರ್ಥನೆಯೊಂದಿಗೆ ಆರಂಭವಾದ ಸಮಾರಂಭವನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ತಳೂರು ಕಿಶೋರ್ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಮಾದಪ್ಪ ಮಾತನಾಡಿ, “ಪ್ರತಿಭಾ ಕಾರಂಜಿ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಹೊರತರಲು ಅತ್ಯುತ್ತಮ ವೇದಿಕೆಯಾಗಿದೆ. ಮಕ್ಕಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಾಧನೆಯ ಹಾದಿಯಲ್ಲಿ ಸಾಗಬೇಕು” ಎಂದು ಶುಭ ಹಾರೈಸಿದರು.

ಸಮೂಹ ಸಂಪನ್ಮೂಲ ವ್ಯಕ್ತಿ (CRP) ಚಂದ್ರಿಕಾ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿಭಾ ಕಾರಂಜಿಯ ಉದ್ದೇಶ, ಮಹತ್ವ ಹಾಗೂ ವಿದ್ಯಾರ್ಥಿಗಳ ಸರ್ವಾಂಗೀಣ ಪ್ರತಿಭಾ ವಿಕಸನದಲ್ಲಿ ಈ ವೇದಿಕೆಯ ಪಾತ್ರವನ್ನು ವಿವರಿಸಿದರು. ಶಾಲೆಯ ಮುಖ್ಯ ಶಿಕ್ಷಕರು ಕಾರ್ಯಕ್ರಮ ನಿರೂಪಿಸಿದರು.

ಉದ್ಘಾಟನಾ ಸಮಾರಂಭದ ಬಳಿಕ ನಿಗದಿತ ಕೊಠಡಿಗಳಲ್ಲಿ ವಿವಿಧ ವಿಭಾಗಗಳ ಸ್ಪರ್ಧೆಗಳನ್ನು ವ್ಯವಸ್ಥಿತವಾಗಿ ನಡೆಸಲಾಯಿತು. ಕ್ಲಸ್ಟರ್ ವ್ಯಾಪ್ತಿಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಶಿಕ್ಷಕಿ ಯಮುನಾ ವಂದನಾರ್ಪಣೆ ನೆರವೇರಿಸಿದರು.

– ವರದಿ: ಪ್ರಿತುನ್ ಪೂವಣ್ಣ, ಭಾಗಮಂಡಲ

About The Author

error: Content is protected !!