November 22, 2026

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ‘ಯುವ ಸಂಸತ್ತು’ ಉದ್ಘಾಟಿಸಿದ ಶಾಸಕ ಡಾ. ಮಂತರ್ ಗೌಡ

ವಿದ್ಯಾರ್ಥಿಗಳು ದೊಡ್ಡ ಕನಸುಗಳನ್ನು ಕಂಡು, ಶಿಸ್ತು ಮತ್ತು ಪರಿಶ್ರಮದಿಂದ ಸಾಧನೆಯ ಹಾದಿಯಲ್ಲಿ ಮುನ್ನಡೆಯಲು ಕರೆ

ಮಡಿಕೇರಿ (ಕೊಡಗು): 2026ನೇ ಸಾಲಿನ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಆಯೋಜಿಸಲಾಗಿದ್ದ ‘ಯುವ ಸಂಸತ್ತು’ ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, “ವಿದ್ಯಾರ್ಥಿಗಳು ಜೀವನದಲ್ಲಿ ದೊಡ್ಡ ಕನಸುಗಳನ್ನು ಕಾಣಬೇಕು. ಆ ಕನಸುಗಳನ್ನು ನನಸಾಗಿಸಿಕೊಳ್ಳುವ ಛಲ, ಆತ್ಮವಿಶ್ವಾಸ ಹಾಗೂ ಸಾಧಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಸ್ಪಷ್ಟ ಗುರಿಯೊಂದಿಗೆ ನಿರಂತರ ಪರಿಶ್ರಮ ಮತ್ತು ಶ್ರದ್ಧೆಯಿಂದ ಮುನ್ನಡೆದಾಗ ಮಾತ್ರ ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ” ಎಂದು ಕರೆ ನೀಡಿದರು.

ಮೌಲ್ಯಾಧಾರಿತ ಶಿಕ್ಷಣ ಮತ್ತು ನಾಯಕತ್ವಕ್ಕೆ ಒತ್ತು: “ವಿದ್ಯಾರ್ಥಿ ಜೀವನವು ಭವಿಷ್ಯವನ್ನು ರೂಪಿಸಿಕೊಳ್ಳುವ ಅತ್ಯಮೂಲ್ಯ ಹಂತವಾಗಿದೆ. ಈ ಅವಧಿಯನ್ನು ಸದುಪಯೋಗಪಡಿಸಿಕೊಂಡು ಶಿಕ್ಷಣದ ಜೊತೆಗೆ ಶಿಸ್ತು, ಸಂಸ್ಕಾರ ಹಾಗೂ ಉತ್ತಮ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿಕೊಂಡು ಸಾಧನೆಯ ಹಾದಿಯಲ್ಲಿ ಮುನ್ನಡೆಯಬೇಕು” ಎಂದು ತಿಳಿಸಿದರು.

“ಯುವ ಸಂಸತ್ತಿನಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಆಶಯಗಳು, ನಾಯಕತ್ವ ಗುಣ ಹಾಗೂ ಸಾಮಾಜಿಕ ಜವಾಬ್ದಾರಿಯ ಅರಿವು ಮೂಡಿಸಲು ಅತ್ಯಂತ ಸಹಕಾರಿಯಾಗಿವೆ. ಯುವಜನರು ದೇಶದ ಭವಿಷ್ಯದ ಶಕ್ತಿಯಾಗಿದ್ದು, ಜವಾಬ್ದಾರಿಯುತ ನಾಗರಿಕರಾಗಿ ಹಾಗೂ ಉತ್ತಮ ನಾಯಕರಾಗಿ ರೂಪುಗೊಳ್ಳಬೇಕು ಎಂಬುದು ನನ್ನ ಆಶಯ” ಎಂದು ಶಾಸಕ ಡಾ. ಮಂತರ್ ಗೌಡ ಕಿವಿಮಾತು ಹೇಳಿದರು.

– ವರದಿ: ಪ್ರಿತುನ್ ಪೂವಣ್ಣ, ಮಡಿಕೇರಿ

About The Author

error: Content is protected !!