November 22, 2026

ಪ್ರಧಾನಿ ವಿರುದ್ಧದ ಟೀಕೆಗೆ ಬಿಜೆಪಿ ತೀವ್ರ ಆಕ್ಷೇಪ; ಶಾಸಕ ಮಂಕಾಳ ವೈದ್ಯ ವಿರುದ್ಧ ಕಮಲ ನಾಯಕರ ವಾಗ್ದಾಳಿ

ಚುನಾವಣಾ ಭರವಸೆ, ಕ್ಷೇತ್ರದ ಅಭಿವೃದ್ಧಿ ಹಾಗೂ ಸ್ಥಳೀಯ ಸಮಸ್ಯೆಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಗಳ ಸುರಿಮಳೆ

ಭಟ್ಕಳ (ಉತ್ತರ ಕನ್ನಡ): ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಶಾಸಕ ಹಾಗೂ ವಿಧಾನಸಭೆ ಉಪಸಭಾಪತಿ ಮಂಕಾಳ ವೈದ್ಯ ನೀಡಿರುವ ಹೇಳಿಕೆಯನ್ನು ಬಿಜೆಪಿ ಭಟ್ಕಳ ಮಂಡಲ ತೀವ್ರವಾಗಿ ಖಂಡಿಸಿದೆ. ಶುಕ್ರವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಮುಖಂಡರು, ಶಾಸಕರ ಆಡಳಿತಾವಧಿಯ ಅಭಿವೃದ್ಧಿ ಕಾರ್ಯಗಳು ಮತ್ತು ಈಡೇರದ ಚುನಾವಣಾ ಭರವಸೆಗಳನ್ನು ಮುಂದಿಟ್ಟುಕೊಂಡು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಆತ್ಮಾವಲೋಕನ ಮಾಡಿಕೊಳ್ಳಲಿ – ಸುನೀಲ್ ನಾಯ್ಕ: ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಸುನೀಲ್ ನಾಯ್ಕ, “ದೇಶದ ಪ್ರಧಾನಿಯವರ ಕುರಿತು ಟೀಕೆ ಮಾಡುವ ಮೊದಲು ತಮ್ಮ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಶಾಸಕರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಕಳೆದ ಮೂರೂವರೆ ವರ್ಷಗಳ ಆಡಳಿತದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ವೇಗ ದೊರೆತಿಲ್ಲ; ಬದಲಾಗಿ ಅಧಿಕಾರದ ಪ್ರಭಾವ ಬಳಸಿ ದಬ್ಬಾಳಿಕೆ ನಡೆಸಲಾಗುತ್ತಿದೆ” ಎಂದು ಆರೋಪಿಸಿದರು.

“ಚುನಾವಣೆಯ ಸಂದರ್ಭದಲ್ಲಿ ಗೊಂಡ ಮತ್ತು ಮೊಗೇರ ಸಮುದಾಯದವರಿಗೆ ಪರಿಶಿಷ್ಟ ಜಾತಿ (SC) ಪ್ರಮಾಣಪತ್ರ ಕೊಡಿಸುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಇಂದಿಗೂ ಆ ಸಮಸ್ಯೆ ಬಗೆಹರಿದಿಲ್ಲ. ಭರವಸೆ ಈಡೇರದ ಹಿನ್ನೆಲೆಯಲ್ಲಿ ಬೆಳಕೆ ಹಾಗೂ ಬೊಮ್ಮನಕೇರಿ ಭಾಗದ ಮಹಿಳೆಯರು ದಯಾಮರಣ ಕೋರಿ ಅರ್ಜಿ ಸಲ್ಲಿಸುವ ಪರಿಸ್ಥಿತಿ ಎದುರಾಗಿದೆ” ಎಂದು ಸುನೀಲ್ ನಾಯ್ಕ ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೆ, ಬಡವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೆರವು ಕೊಡಿಸುವಲ್ಲಿಯೂ ನಿರೀಕ್ಷಿತ ಪ್ರಯತ್ನವಾಗಿಲ್ಲ ಹಾಗೂ ತಮ್ಮ ಅವಧಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಕಲ್ಪಿಸಿದ್ದ ಬಸ್ ಸೌಲಭ್ಯಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ದೂರಿದರು.

ಸ್ಥಳೀಯ ಸಮಸ್ಯೆಗಳು ಮತ್ತು ಆಡಳಿತದ ಕುರಿತು ಟೀಕೆ: ಮಾಜಿ ನಿಗಮ ಮಂಡಳಿ ಅಧ್ಯಕ್ಷ ಗೋವಿಂದ ನಾಯ್ಕ ಮಾತನಾಡಿ, “ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರು ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಗೊಳಿಸಿದ 1975ರ ಇತಿಹಾಸವನ್ನೂ ಸ್ಮರಿಸಬೇಕು. ಗೊಂಡ ಸಮುದಾಯಕ್ಕೆ 24 ಗಂಟೆಯೊಳಗೆ ಪ್ರಮಾಣಪತ್ರ ಕೊಡಿಸುವುದಾಗಿ ನೀಡಿದ್ದ ಭರವಸೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಅಂತರರಾಷ್ಟ್ರೀಯ ಮಟ್ಟದಲ್ಲಿ ಗೌರವಿಸಲ್ಪಡುವ ಪ್ರಧಾನಿಯವರ ಕುರಿತು ಇಂತಹ ಹೇಳಿಕೆ ನೀಡಿರುವುದು ಸಮಂಜಸವಲ್ಲ” ಎಂದರು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ ನಾಯ್ಕ ಮಾತನಾಡಿ, “ಉಪಸಭಾಪತಿಯಂತಹ ಸಾಂವಿಧಾನಿಕ ಮತ್ತು ಜವಾಬ್ದಾರಿಯುತ ಸ್ಥಾನದಲ್ಲಿರುವವರು ತಮ್ಮ ಮಾತು ಮತ್ತು ನಡವಳಿಕೆಯಲ್ಲಿ ಹುದ್ದೆಯ ಘನತೆಯನ್ನು ಕಾಪಾಡಿಕೊಳ್ಳಬೇಕು. ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರು ಹೋರಾಟ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ; ಗ್ಯಾರಂಟಿ ಸಮಿತಿಗಳ ಹೆಸರಿನಲ್ಲಿ ಹೊಸ ಹುದ್ದೆ ಸೃಷ್ಟಿಸಿ ವೆಚ್ಚ ಹೆಚ್ಚಿಸಲಾಗುತ್ತಿದೆ” ಎಂದು ಟೀಕಿಸಿದರು.

ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷ ಈಶ್ವರ ನಾಯ್ಕ ಮಾತನಾಡಿ, “ಮೊಗೇರ ಸಮಾಜಕ್ಕೆ ಎಸ್‌ಸಿ ಪ್ರಮಾಣಪತ್ರ ಕೊಡಿಸುವ ಭರವಸೆ ಏನಾಯಿತು? ಪ್ರಜಾಸೇವೆ ಕಾರ್ಯಕ್ರಮದಲ್ಲಿ ಸ್ವಂತ ಸಮಾಜದ ಮಹಿಳೆಯರ ಪ್ರಶ್ನೆಗೆ ಉತ್ತರಿಸಲಾಗದೆ ಜಿಲ್ಲಾಧಿಕಾರಿಯತ್ತ ಬೆರಳು ತೋರಿಸಿ ಜಾರಿಕೊಂಡಿದ್ದೇಕೆ?” ಎಂದು ಪ್ರಶ್ನಿಸಿದರು. ಅಲ್ಲದೆ, ವೆಂಕಟಾಪುರದ ಬಳಿ ಕಾನೂನುಬಾಹಿರ ಕಾಮಗಾರಿ ನಡೆಯುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದರು.

ಮೂಲಸೌಕರ್ಯ ಕಲ್ಪಿಸಲು ಆಗ್ರಹ: ಭಟ್ಕಳದ ರಿಕ್ಷಾ ಚಾಲಕರ ನಿಲ್ದಾಣಕ್ಕೆ ಸೂಕ್ತ ಜಾಗ ಕಲ್ಪಿಸುವುದು, ಮೀನು ಮಾರುಕಟ್ಟೆಯ ಅವ್ಯವಸ್ಥೆ ಸರಿಪಡಿಸುವುದು ಹಾಗೂ ಮೂರ್ಕಟ್ಟೆ ಭಾಗದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಶಾಸಕರ ಆದ್ಯತೆಯಾಗಬೇಕು. ಆಧುನಿಕ ಮೀನು ಮಾರುಕಟ್ಟೆ ನಿರ್ಮಿಸುವ ಭರವಸೆ ನೀಡಿದ್ದರೂ ಅನುದಾನ ಬಿಡುಗಡೆ ಮಾಡಿಸುವಲ್ಲಿ ವಿಫಲರಾಗಿದ್ದಾರೆ ಹಾಗೂ ‘ನಮ್ಮ ಮನೆ ನಮ್ಮ ಹಕ್ಕು’ ಅಭಿಯಾನದ ಬಗ್ಗೆಯೂ ಗಮನಹರಿಸಿಲ್ಲ ಎಂದು ಬಿಜೆಪಿ ನಾಯಕರು ದೂರಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಸುಬ್ರಾಯ ದೇವಾಡಿಗ ಹಾಗೂ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶಿವಾನಿ ಶಾಂತಾರಾಮ ಉಪಸ್ಥಿತರಿದ್ದರು.

About The Author

error: Content is protected !!