ವೇತನ ಹೆಚ್ಚಳ ಹಾಗೂ ಅಗತ್ಯ ಸೌಲಭ್ಯ ಕಲ್ಪಿಸಲು ಒತ್ತಾಯ; ಹೋರಾಟಗಾರರೊಂದಿಗೆ ಮಾತುಕತೆ ನಡೆಸಿ ಸಂಕಷ್ಟಕ್ಕೆ ಸ್ಪಂದಿಸಲು ಸಾಮಾಜಿಕ ಕಾರ್ಯಕರ್ತನ ಮನವಿ
ಹೊನ್ನಾವರ (ಉತ್ತರ ಕನ್ನಡ): ತಮ್ಮ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟಕ್ಕೆ ಸಾಮಾಜಿಕ ಕಾರ್ಯಕರ್ತ ಮಾಸ್ತಪ್ಪ ನಾಯ್ಕ ಬಲ್ಸೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಆರೋಗ್ಯ ಇಲಾಖೆಯ ವಿವಿಧ ಸೇವೆಗಳನ್ನು ಜನರಿಗೆ ತಲುಪಿಸುವಲ್ಲಿ ಆಶಾ ಕಾರ್ಯಕರ್ತೆಯರು ಪ್ರಮುಖ ಪಾತ್ರ ವಹಿಸುತ್ತಿದ್ದರೆ, ಸರ್ಕಾರಿ ಶಾಲೆಗಳ ಮಕ್ಕಳಿಗೆ ನಿತ್ಯ ಪೌಷ್ಟಿಕ ಬಿಸಿಯೂಟ ಒದಗಿಸುವ ಮಹತ್ತರ ಜವಾಬ್ದಾರಿಯನ್ನು ಬಿಸಿಯೂಟ ಕಾರ್ಯಕರ್ತೆಯರು ನಿರ್ವಹಿಸುತ್ತಿದ್ದಾರೆ. ಸಮಾಜದ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅವಿರತವಾಗಿ ಸೇವೆ ಸಲ್ಲಿಸುತ್ತಿರುವ ಈ ಕಾರ್ಯಕರ್ತೆಯರಿಗೆ ಇಂದಿಗೂ ಸಮರ್ಪಕ ವೇತನ ದೊರೆಯದಿರುವುದು ಅತ್ಯಂತ ವಿಷಾದನೀಯ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


ಮಾತುಕತೆ ನಡೆಸಿ ಬೇಡಿಕೆ ಈಡೇರಿಸಿ: “ಅತ್ಯಂತ ಕಡಿಮೆ ವೇತನದಲ್ಲಿ ಹೆಚ್ಚಿನ ಕೆಲಸದ ಒತ್ತಡದೊಂದಿಗೆ ಕರ್ತವ್ಯ ನಿರ್ವಹಿಸುತ್ತಿರುವ ಆಶಾ ಹಾಗೂ ಬಿಸಿಯೂಟ ಕಾರ್ಯಕರ್ತೆಯರ ಸಮಸ್ಯೆಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಅವರು ಗೌರವಯುತ ಜೀವನ ನಡೆಸಲು ಅನುಕೂಲವಾಗುವಂತೆ ವೇತನ ಹೆಚ್ಚಳ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು. ಹೋರಾಟಗಾರರೊಂದಿಗೆ ಸೌಹಾರ್ದಯುತ ಮಾತುಕತೆ ನಡೆಸಿ ಬೇಡಿಕೆಗಳನ್ನು ಈಡೇರಿಸುವ ಬದಲು ಸರ್ಕಾರ ಹಠಮಾರಿತನ ಪ್ರದರ್ಶಿಸುವುದು ಸರಿಯಲ್ಲ” ಎಂದು ಅವರು ಟೀಕಿಸಿದ್ದಾರೆ.
“ರಾಜ್ಯ ಕಾಂಗ್ರೆಸ್ ಸರ್ಕಾರ ಕೂಡಲೇ ತನ್ನ ಧೋರಣೆಯನ್ನು ಬದಲಿಸಿಕೊಂಡು ಆಶಾ ಹಾಗೂ ಬಿಸಿಯೂಟ ಕಾರ್ಯಕರ್ತೆಯರ ಸಂಕಷ್ಟಕ್ಕೆ ಸ್ಪಂದಿಸಬೇಕು. ಸಮಾಜದ ಆರೋಗ್ಯ ಮತ್ತು ಭವಿಷ್ಯದ ಪೀಳಿಗೆಯ ಶಿಕ್ಷಣಕ್ಕಾಗಿ ಶ್ರಮಿಸುತ್ತಿರುವ ಈ ಶ್ರಮಿಕ ವರ್ಗದ ಬದುಕು ಸುಧಾರಿಸುವುದು ಸರ್ಕಾರದ ಮೊದಲ ಆದ್ಯತೆಯಾಗಬೇಕು” ಎಂದು ಮಾಸ್ತಪ್ಪ ನಾಯ್ಕ ಆಗ್ರಹಿಸಿದ್ದಾರೆ.

More Stories
ಮಕ್ಕಳ ಸುಪ್ತ ಪ್ರತಿಭೆ ಅನಾವರಣಕ್ಕೆ ‘ಪ್ರತಿಭಾ ಕಾರಂಜಿ’ ಸೂಕ್ತ ವೇದಿಕೆ – ಬಿಇಒ ಬಿ.ಎಸ್. ಭಜಂತ್ರಿ
ಪಶ್ಚಿಮಘಟ್ಟದ ನೈಜ ಸೂಕ್ಷ್ಮ ಪ್ರದೇಶಗಳಲ್ಲಿ ಬ್ರಹತ್ ಯೋಜನೆಗಳಿಗೆ ನಿಷೇಧ ಹೇರಲಿ: ಚಂದ್ರಕಾಂತ ಕೊಚರೇಕರ
ಫಿಯಾನ್ ಚಂಡಮಾರುತ ದುರಂತಕ್ಕೆ 17 ವರ್ಷ; ಸಂತ್ರಸ್ತ ಕುಟುಂಬಗಳಿಗೆ ಇನ್ನೂ ಸಿಗದ ಮರಣ ದಾಖಲೆ