March 13, 2026

ಹಿರೇಗುತ್ತಿ ಸೆಕೆಂಡರಿ ಹೈಸ್ಕೂಲ್ ವಿದ್ಯಾರ್ಥಿನಿಯರಿಗೆ ಇನ್ಸ್ಪೈರ್ ಮಾನಕ್ ಪ್ರಶಸ್ತಿಗೆ ಆಯ್ಕೆ

ಕುಮಟಾ: ತಾಲೂಕಿನ ಹಿರೇಗುತ್ತಿಯ ಸೆಕೆಂಡರಿ ಹೈಸ್ಕೂಲಿನ ಇಬ್ಬರು ಪ್ರತಿಭಾನ್ವಿತ ವಿದ್ಯಾರ್ಥಿನಿಯರು 2025–26ನೇ ಸಾಲಿನ ಪ್ರತಿಷ್ಠಿತ ಇನ್ಸ್ಪೈರ್ ಅವಾರ್ಡ್ ಮಾನಕ್ (INSPIRE MANAK) ಯೋಜನೆಗೆ ಆಯ್ಕೆಯಾಗಿದ್ದಾರೆ.

ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಮಹತ್ವದ ಯೋಜನೆಯಾದ ಈ ಕಾರ್ಯಕ್ರಮವನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ (DST) ಹಾಗೂ ಅದರ ಸ್ವಾಯತ್ತ ಸಂಸ್ಥೆಯಾದ ನ್ಯಾಷನಲ್ ಇನ್ನೋವೇಶನ್ ಫೌಂಡೇಶನ್–ಇಂಡಿಯಾ (NIF) ಸಹಯೋಗದಲ್ಲಿ ಜಾರಿಗೆ ತರಲಾಗುತ್ತಿದೆ.

ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿಯರಾದ ಎನ್. ವಿ. ಇಂಪನಾ ಹಾಗೂ ಸೃಷ್ಟಿ ಗಂಗಾಧರ ಹರಿಕಂತ್ರ ಅವರು ವಿಜ್ಞಾನಾಧಾರಿತ ಹಾಗೂ ಸಮಾಜಮುಖಿ ನವೀನ ಕಲ್ಪನೆಗಳನ್ನು ಮಂಡಿಸಿದ ಹಿನ್ನೆಲೆಯಲ್ಲಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಸಂಸ್ಥೆಯ ಅಧ್ಯಕ್ಷರಾದ ಶ್ರೀ ಹೊನ್ನಪ್ಪ ಎನ್. ನಾಯಕ ಅವರು ವಿದ್ಯಾರ್ಥಿನಿಯರನ್ನು ಅಭಿನಂದಿಸಿ, ಅವರ ಸೃಜನಶೀಲತೆ, ವೈಜ್ಞಾನಿಕ ಮನೋಭಾವನೆ ಹಾಗೂ ನವೀನ ಚಿಂತನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಾಧನೆ ಶಾಲೆಯಲ್ಲಿ ಸೃಜನಾತ್ಮಕ ಚಿಂತನೆ ಮತ್ತು ವೈಜ್ಞಾನಿಕ ಮನೋಭಾವ ಬೆಳೆಸಲು ನಡೆಸುತ್ತಿರುವ ನಿರಂತರ ಪ್ರಯತ್ನಗಳ ಫಲವಾಗಿದೆ ಎಂದು ಹೇಳಿದರು.

ರಾಜ್ಯ ಪ್ರಶಸ್ತಿ ವಿಜೇತ ವಿಜ್ಞಾನ ಶಿಕ್ಷಕರಾದ ಮಹಾದೇವ ಬಿ. ಗೌಡ ಅವರ ಮಾರ್ಗದರ್ಶನದಲ್ಲಿ ಶಾಲೆಯ ವಿದ್ಯಾರ್ಥಿಗಳು ಹಲವು ಬಾರಿ ವಿಜ್ಞಾನ ವಸ್ತು ಪ್ರದರ್ಶನ, ವಿಚಾರಗೋಷ್ಠಿ, ಪ್ರತಿಭಾ ಕಾರಂಜಿ, ಮಕ್ಕಳ ವಿಜ್ಞಾನ ಸಮಾವೇಶ ಹಾಗೂ ಇನ್ಸ್ಪೈರ್ ಅವಾರ್ಡ್ ಮಾನಕ್ ಸ್ಪರ್ಧೆಗಳಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿರುವುದು ಗಮನಾರ್ಹವಾಗಿದೆ. ಪ್ರತಿವರ್ಷವೂ ವಿದ್ಯಾರ್ಥಿಗಳನ್ನು ಇನ್ಸ್ಪೈರ್ ಅವಾರ್ಡ್‌ನಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸುತ್ತಿರುವುದು ಅವರ ಸತತ ಪರಿಶ್ರಮದ ಫಲವಾಗಿದೆ. ಹೈಸ್ಕೂಲ್ ವಿದ್ಯಾರ್ಥಿಗಳು ಪ್ರತಿ ವರ್ಷವೂ ಈ ಪ್ರಶಸ್ತಿಯನ್ನು ಪಡೆಯುತ್ತಿರುವುದು ಶಾಲೆಗೆ ಹೆಮ್ಮೆಯ ಸಂಗತಿಯಾಗಿದೆ.

ಮುಖ್ಯ ಶಿಕ್ಷಕರಾದ ವಿಶ್ವನಾಥ್ ಬೇವಿನಕಟ್ಟಿ ಅವರು ಪ್ರಶಸ್ತಿಗೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಶುಭಾಶಯಗಳನ್ನು ಕೋರಿದರು. ಇದೇ ಸಂದರ್ಭದಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಎಂಟನೇ ತರಗತಿಯ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಪೋಷಕರು ಶೀಘ್ರದಲ್ಲೇ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು. ಗುಣಮಟ್ಟದ ಶಿಕ್ಷಣ ಹಾಗೂ ಸಮಗ್ರ ವ್ಯಕ್ತಿತ್ವ ವಿಕಾಸಕ್ಕಾಗಿ ವಿದ್ಯಾರ್ಥಿಗಳು ಮತ್ತು ಪೋಷಕರು ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿಯನ್ನು ಮೊದಲ ಆದ್ಯತೆಯಾಗಿ ಆಯ್ಕೆ ಮಾಡುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಸಂಸ್ಥೆಯ ಉಪಾಧ್ಯಕ್ಷರು, ಕಾರ್ಯದರ್ಶಿ, ಸರ್ವ ಸದಸ್ಯರು, ಶಾಲೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಬ್ರಹ್ಮಜಟಕ ಯುವಕ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸೇರಿದಂತೆ ಊರಿನ ನಾಗರಿಕರು ವಿದ್ಯಾರ್ಥಿನಿಯರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ವರದಿ ; ರಾಮೂ ಹಿರೇಗುತ್ತಿ

About The Author

error: Content is protected !!