May 23, 2026

ಅಥಣಿಯಲ್ಲಿ ಟ್ರಾಫಿಕ್ ಅವ್ಯವಸ್ಥೆ ತಾರಕಕ್ಕೇರಿದೆ

ಸಿಗ್ನಲ್ ಕೊರತೆಯಿಂದ ವಾಹನ ಸವಾರರ ಪರದಾಟ, ಶಾಶ್ವತ ಪರಿಹಾರಕ್ಕೆ ಸಾರ್ವಜನಿಕರ ಆಗ್ರಹ

ಅಥಣಿ: ಬೆಳಗಾವಿ ಜಿಲ್ಲೆಯ ಅತಿ ದೊಡ್ಡ ತಾಲೂಕು ಕೇಂದ್ರವಾಗಿರುವ ಅಥಣಿಯಲ್ಲಿ ದಿನದಿಂದ ದಿನಕ್ಕೆ ವಾಹನ ದಟ್ಟಣೆ ಹೆಚ್ಚುತ್ತಿದ್ದು, ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಪ್ರಮುಖ ವೃತ್ತಗಳಲ್ಲಿ ಟ್ರಾಫಿಕ್ ಸಿಗ್ನಲ್ ವ್ಯವಸ್ಥೆ ಇಲ್ಲದಿರುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ನಿತ್ಯ ಪರದಾಡುವಂತಾಗಿದೆ.

ಅಂಬೇಡ್ಕರ್ ವೃತ್ತ, ದೇಸಾಯಿ ಸರ್ಕಲ್ ಹಾಗೂ ಬಸವೇಶ್ವರ ವೃತ್ತಗಳಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಯಾವುದೇ ಸಮರ್ಪಕ ವ್ಯವಸ್ಥೆ ಇಲ್ಲದಿರುವುದರಿಂದ ವಾಹನಗಳು ಗಂಟೆಗಟ್ಟಲೆ ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಲಾ-ಕಾಲೇಜು ಸಮಯ ಹಾಗೂ ವ್ಯಾಪಾರ ವಹಿವಾಟಿನ ಅವಧಿಯಲ್ಲಿ ಟ್ರಾಫಿಕ್ ಸಮಸ್ಯೆ ಮತ್ತಷ್ಟು ಗಂಭೀರವಾಗುತ್ತಿದೆ.

ನಗರದ ಜನಸಂಖ್ಯೆ ಮತ್ತು ವಾಹನಗಳ ಸಂಖ್ಯೆ ಹೆಚ್ಚಾದರೂ ಮೂಲಭೂತ ಟ್ರಾಫಿಕ್ ವ್ಯವಸ್ಥೆ ಅಭಿವೃದ್ಧಿಯಾಗಿಲ್ಲ ಎಂಬುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಸಂಚಾರ ಸುಗಮಗೊಳಿಸಲು ಪ್ರತ್ಯೇಕ ಟ್ರಾಫಿಕ್ ಪೊಲೀಸ್ ಠಾಣೆ ಸ್ಥಾಪನೆ, ಪ್ರಮುಖ ರಸ್ತೆಗಳಲ್ಲಿ ರೋಡ್ ಬ್ರೇಕರ್ ಅಳವಡಿಕೆ ಹಾಗೂ ರಸ್ತೆ ಅಗಲೀಕರಣ ಕಾರ್ಯಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ಸಾಮಾಜಿಕ ಹೋರಾಟಗಾರ ಪ್ರವೀಣ್ ನಾಯಕ್ ಒತ್ತಾಯಿಸಿದ್ದಾರೆ.

ಇದಲ್ಲದೆ, ಅಥಣಿ ಕೆರೆ ಅಭಿವೃದ್ಧಿ, ಮೋಟಗಿ ತೋಟ ಶಾಲೆಯಲ್ಲಿ 9 ಮತ್ತು 10ನೇ ತರಗತಿ ಆರಂಭ ಹಾಗೂ ಅಥಣಿ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವುದು ಜನರ ದಶಕಗಳ ಬೇಡಿಕೆಯಾಗಿದೆ. ಆದರೆ ಈ ಪ್ರಮುಖ ಅಭಿವೃದ್ಧಿ ಯೋಜನೆಗಳು ಇನ್ನೂ ಅನುಷ್ಠಾನಗೊಂಡಿಲ್ಲ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ಮುಂದಿನ ದಿನಗಳಲ್ಲಿ ಅಥಣಿಯ ಸಮಗ್ರ ಅಭಿವೃದ್ಧಿಗಾಗಿ ಮುರುಗೇಂದ್ರ ಶಿವಯೋಗಿ ರೈಲ್ವೆ ನಿಲ್ದಾಣ ಘೋಷಣೆ ಹಾಗೂ ಅಥಣಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕೆಂಬ ಒತ್ತಾಯವೂ ಹೆಚ್ಚಾಗಿದೆ. ಜನಪ್ರತಿನಿಧಿಗಳು ಈ ಬಗ್ಗೆ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಈ ಬಾರಿ ಸರ್ಕಾರ ನಡೆಯಲಿರುವ ಅಧಿವೇಶನದಲ್ಲಿ ಅಥಣಿಯ ಟ್ರಾಫಿಕ್ ಸಮಸ್ಯೆ ಸೇರಿದಂತೆ ವಿವಿಧ ಜ್ವಲಂತ ಸಮಸ್ಯೆಗಳ ಬಗ್ಗೆ ಗಂಭೀರ ಚರ್ಚೆ ನಡೆಸಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವರದಿ: ಮಹೇಶ್ ಶರ್ಮಾ

About The Author

error: Content is protected !!