ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ ಎಸ್.ಎ.ವಿ.ಟಿ ಕಾಲೇಜು ಸಭಾಂಗಣದಲ್ಲಿ ಮೇ 25ರಂದು ಪ್ರೌಢ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಕ್ಷೇತ್ರದ ಎಲ್ಲಾ ಪ್ರೌಢಶಾಲಾ ಶಿಕ್ಷಕರು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕೃತಜ್ಞತಾ ಸಮರ್ಪಣಾ ಸಮಾರಂಭವನ್ನು ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಆಯೋಜಿಸಿದ್ದರು. ಇದೇ ಸಂದರ್ಭದಲ್ಲಿ ಗಣನೀಯ ಅಂಕಗಳನ್ನು ಪಡೆದು ತಾಲೂಕಿಗೆ ಕೀರ್ತಿ ತಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಭವ್ಯ ಅಭಿನಂದನಾ ಸಮಾರಂಭವೂ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರು, ಎಲ್ಲರೂ ಸಕಾರಾತ್ಮಕ ಮನೋಭಾವ ಹೊಂದಿದಾಗ ಮಾತ್ರ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಅಭಿಪ್ರಾಯಪಟ್ಟರು. ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ ಬೇವೂರು ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಪ್ರೌಢಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರಾದ ವೆಂಕಟೇಶ ರಾಮಚಂದ್ರಪ್ಪ ಹಾಗೂ ಎಸ್‌ಎಸ್‌ಎಲ್‌ಸಿ ಜಿಲ್ಲಾ ನೋಡಲ್ ಅಧಿಕಾರಿ ಹುಲಿಬಂಡಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಸಾನಿಧ್ಯವನ್ನು ಕೂಡ್ಲಿಗಿ ಹಿರೇಮಠದ ಶ್ರೀ ಪ್ರಶಾಂತಸಾಗರ ಸ್ವಾಮೀಜಿಗಳು ವಹಿಸಿ ಆಶೀರ್ವಚನ ನೀಡಿದರು.
ಪ್ರೌಢಶಾಲಾ ಶಿಕ್ಷಣದಲ್ಲಿ ಕೂಡ್ಲಿಗಿ ಕ್ಷೇತ್ರವು ಹಿಂದೆ ರಾಜ್ಯದಲ್ಲಿ 25ನೇ ಸ್ಥಾನದಲ್ಲಿದ್ದು, 2025-26ನೇ ಸಾಲಿನಲ್ಲಿ 10ನೇ ಸ್ಥಾನಕ್ಕೇರಿರುವುದು ಹೆಮ್ಮೆಯ ಸಂಗತಿ ಎಂದು ಕಾರ್ಯಕ್ರಮದಲ್ಲಿ ತಿಳಿಸಲಾಯಿತು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಇನ್ನಷ್ಟು ಸಾಧನೆ ಮಾಡಿ ರಾಜ್ಯ ಮಟ್ಟದಲ್ಲಿ ದಾಖಲೆ ನಿರ್ಮಿಸಬೇಕೆಂಬ ಆಶಯದೊಂದಿಗೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಸಮಾರಂಭ ಆಯೋಜಿಸಲಾಗಿತ್ತು.
2025-26ನೇ ಶೈಕ್ಷಣಿಕ ಸಾಲಿನಲ್ಲಿ ಶೇ.100 ಫಲಿತಾಂಶ ಪಡೆದ 296 ಪ್ರೌಢಶಾಲೆಗಳ ಮುಖ್ಯ ಶಿಕ್ಷಕರಿಗೆ ಸನ್ಮಾನಿಸಲಾಯಿತು. ಅಲ್ಲದೆ ಶೇ.100 ಅಂಕ ಹಾಗೂ ಗಣನೀಯ ಅಂಕಗಳನ್ನು ಪಡೆದು ತಾಲೂಕಿಗೆ ಕೀರ್ತಿ ತಂದ 37 ಪ್ರತಿಭಾನ್ವಿತ ವಿದ್ಯಾರ್ಥಿಗಳು, ವಿವಿಧ ವಿಷಯಗಳಲ್ಲಿ 100 ಅಂಕ ಗಳಿಸಿದ ಶಿಕ್ಷಕರು, ನಾಲ್ವರು ಶಿಕ್ಷಣ ಸಂಯೋಜಕರು (ಅಖP) ಹಾಗೂ ನಾಲ್ವರು ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿಗಳನ್ನು ವೇದಿಕೆಯಲ್ಲಿ ಗೌರವಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ ಬೇವೂರು, ಜಿಲ್ಲಾ ಉಪನಿರ್ದೇಶಕ ವೆಂಕಟೇಶ ರಾಮಚಂದ್ರಪ್ಪ ಹಾಗೂ ಎಸ್‌ಎಸ್‌ಎಲ್‌ಸಿ ಜಿಲ್ಲಾ ನೋಡಲ್ ಅಧಿಕಾರಿ ಹುಲಿಬಂಡಿ ಅವರನ್ನು ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಸನ್ಮಾನಿಸಿದರು. ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಕೂಡ್ಲಿಗಿ ಹಿರೇಮಠದ ಶ್ರೀ ಪ್ರಶಾಂತಸಾಗರ ಸ್ವಾಮೀಜಿಗಳನ್ನು ಭಕ್ತಿಪೂರ್ವಕವಾಗಿ ಗೌರವಿಸಲಾಯಿತು.
ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡುತ್ತಾ, ಶಾಲೆಗಳಿಗೆ ಮೂಲಸೌಕರ್ಯಗಳನ್ನು ಒದಗಿಸುವ ಮೂಲಕ ಹಗಲಿರುಳು ಶ್ರಮಿಸುತ್ತಿರುವ ಕ್ಷೇತ್ರದ ಶಾಸಕರಾದ ಡಾ. ಎನ್.ಟಿ. ಶ್ರೀನಿವಾಸ್ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ ಬೇವೂರು ಅವರ ನೇತೃತ್ವದಲ್ಲಿ ಶಿಕ್ಷಣ ಇಲಾಖೆ ಹಾಗೂ ಪ್ರೌಢಶಾಲಾ ಶಿಕ್ಷಕರ ಸಂಘದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ವೇದಿಕೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಟಿ. ನರಸಪ್ಪ, ನೌಕರರ ಸಂಘದ ಅಧ್ಯಕ್ಷ ವೆಂಕಟೇಶ ಸೇರಿದಂತೆ ನೂರಾರು ಪ್ರೌಢಶಾಲಾ ಶಿಕ್ಷಕರು, ಪ್ರತಿಭಾನ್ವಿತ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

More Stories