ಭಟ್ಕಳ: ತಟ್ಟಿಹಕ್ಕಲು ದುರಂತದ ದಿನ ನಡೆದ ಮುರಿನಕಟ್ಟೆ ಧ್ವಂಸ ಪ್ರಕರಣದ ಹಿಂದೆ ಇರುವ ಪ್ರಮುಖ ಆರೋಪಿಗಳನ್ನು ಬಂಧಿಸಿ, ಘಟನೆ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಆಗ್ರಹಿಸಿದರು.


ಭಟ್ಕಳದಲ್ಲಿ ಬಿಜೆಪಿ ಮಂಡಲ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 24ರಂದು ತಟ್ಟಿಹಕ್ಕಲಿನಲ್ಲಿ ಸಂಭವಿಸಿದ ದುರಂತದಲ್ಲಿ ಶಿರಾಲಿಯ 11 ಮಂದಿ ಮೃತಪಟ್ಟಿರುವುದು ದುಃಖಕರ ಸಂಗತಿ. ಮೃತರ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವನ ತಿಳಿಸಿದ್ದೇನೆ ಎಂದು ಹೇಳಿದರು. ದುರಂತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಜಿಲ್ಲಾಡಳಿತ ಸಮಗ್ರ ತನಿಖೆ ನಡೆಸಿ ವರದಿ ನೀಡಬೇಕು. ಘಟನೆಯ ಬಗ್ಗೆ ವಿವಿಧ ರೀತಿಯ ಮಾಹಿತಿ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಅಧಿಕೃತ ಸ್ಪಷ್ಟನೆ ಅಗತ್ಯವಿದೆ ಎಂದರು.

ಅದೇ ದಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಮುರಿನಕಟ್ಟೆ ಬಳಿ ಹಿಂದೂ ಭಕ್ತರು ಕಟ್ಟೆ ನಿರ್ಮಿಸಿದ್ದರು. ಬಳಿಕ ಅದನ್ನು ಧ್ವಂಸಗೊಳಿಸಿರುವುದು ಹಿಂದೂ ಸಮಾಜದ ಭಾವನೆಗೆ ನೋವುಂಟು ಮಾಡಿದೆ ಎಂದು ಹೇಳಿದರು. ಕಟ್ಟೆ ಧ್ವಂಸ ಪ್ರಕರಣದಲ್ಲಿ ಕೆಲವರನ್ನು ಬಂಧಿಸಲಾಗಿದೆಯಾದರೂ, ಘಟನೆಯ ಹಿಂದೆ ಇರುವ ಎಲ್ಲರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹರಡಿದವರ ವಿರುದ್ಧವೂ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು.


ಈ ವಿಚಾರವಾಗಿ ನ್ಯಾಯ ಕೇಳಲು ಹೋದ ಬಿಜೆಪಿ ಕಾರ್ಯಕರ್ತರ ಮೇಲೂ ಪ್ರಕರಣ ದಾಖಲಿಸಿರುವುದನ್ನು ಅವರು ವಿರೋಧಿಸಿದರು. ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಮುರಿನಕಟ್ಟೆ ಪುನರ್‌ನಿರ್ಮಾಣಕ್ಕೆ ಆಗ್ರಹಿಸಿ ಜೂನ್ 29ರಂದು ಭಟ್ಕಳದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಅಧ್ಯಕ್ಷ ಬಿ ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್ ಅಶೋಕ ಸೇರಿದಂತೆ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಘಟನೆಯ ಕುರಿತು ಸರ್ಕಾರ ನಿರ್ಪಕ್ಷಪಾತ ತನಿಖೆ ನಡೆಸಿ ಸಾಮಾಜಿಕ ಶಾಂತಿ ಕಾಪಾಡಲು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಶಿವಾನಂದ ನಾಯ್ಕ ಮಾಜಿ ಶಾಸಕ ಸುನೀಲ್ ನಾಯ್ಕ,ಬಿಜೆಪಿ ಜಿಲ್ಲಾ ಅಧ್ಯಕ್ಷ ಎನ್.ಎಸ್. ಹೆಗಡೆ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.

More Stories
ಹೆದ್ದಾರಿ ಅಪಘಾತಕ್ಕೆ ಸ್ಕೂಟಿ ಸವಾರ ಬಲಿ: ಅವೈಜ್ಞಾನಿಕ ವಿನ್ಯಾಸ ಆರೋಪಿಸಿ ಭಟ್ಕಳದಲ್ಲಿ ಸಾರ್ವಜನಿಕರ ಆಕ್ರೋಶ, ಪ್ರತಿಭಟನೆ
ಲಂಡನ್ನಲ್ಲಿ ‘ಅಡ್ವಾನ್ಸ್ಡ್ ನಾಟಿಕಲ್ ಸೈನ್ಸ್’ ಕೋರ್ಸ್ ಯಶಸ್ವಿಯಾಗಿ ಪೂರ್ಣಗೊಳಿಸಿದ ಭಟ್ಕಳದ ಹೆಮ್ಮೆಯ ಯುವಕ ಪ್ರಜ್ವಲ್ ನಾಯ್ಕ
ಬೈಲೂರು ಕ್ಲಸ್ಟರ್ನ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮುಂಬೈನ ಅನಿರುದ್ಧ ಬಾಪು ಟ್ರಸ್ಟ್ನಿಂದ ಉಚಿತ ನೋಟ್ಬುಕ್ ವಿತರಣೆ