

ಪಟ್ಟಣ: ಕನ್ನಡ ನಾಡು ಮತ್ತು ನುಡಿಯ ಅಭ್ಯುದಯಕ್ಕಾಗಿ ಪ್ರತಿಯೊಬ್ಬರೂ ಕಂಕಣಬದ್ಧರಾಗಿ ಕೆಲಸ ಮಾಡಬೇಕಿದೆ ಎಂದು ತಹಸೀಲ್ದಾರ್ ಪ್ರವೀಣ ಕರಾಂಡೆ ಅವರು ಕರೆ ನೀಡಿದರು.

ಇಲ್ಲಿನ ನ್ಯೂ ಇಂಗ್ಲೀಷ್ ಸ್ಕೂಲ್ ಸಭಾಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಜಿಲ್ಲಾ ಹಾಗೂ ತಾಲೂಕು ಘಟಕಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ, ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಶೇಕಡಾ 100 ರಷ್ಟು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ‘ಅಭಿನಂದನಾ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅತ್ಯಂತ ಕ್ರಿಯಾಶೀಲವಾಗಿದ್ದು, ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಸಂಘಟಿಸುತ್ತಾ ಬಂದಿದೆ. ನಮ್ಮ ಭಾಷೆಯನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಸಾಧನೆಗೆ ಶಿಕ್ಷಕರ ಪಾತ್ರ ದೊಡ್ಡದು: ಬಿಇಒ ಜಯಶ್ರೀ ನಾಯ್ಕ
ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಜಯಶ್ರೀ ನಾಯ್ಕ ಮಾತನಾಡಿ, “ಕನ್ನಡ ಭಾಷೆಗೆ ತನ್ನದೇ ಆದ ಅಪಾರ ಪ್ರಾಮುಖ್ಯತೆಯಿದೆ. ಕನ್ನಡ ಭಾಷೆಯಲ್ಲಿ ಪೂರ್ಣಾಂಕ (100 ಕ್ಕೆ 100) ಪಡೆದ ವಿದ್ಯಾರ್ಥಿಗಳ ಸಾಧನೆ ನಿಜಕ್ಕೂ ಮೆಚ್ಚುವಂತದ್ದು. ಅಂತಹ ಪ್ರತಿಭೆಗಳನ್ನು ಗುರುತಿಸಿ ಅಭಿನಂದಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ವಿದ್ಯಾರ್ಥಿಗಳ ಈ ಯಶಸ್ಸಿನ ಹಿಂದೆ ಶಿಕ್ಷಕರ ಶ್ರಮ ಮತ್ತು ಪಾತ್ರವೂ ಹಿರಿದಾಗಿದೆ” ಎಂದು ಶ್ಲಾಘಿಸಿದರು.

ಕನ್ನಡ ಶಾಲೆಗಳ ಮುಚ್ಚುವಿಕೆ ಆತಂಕಕಾರಿ: ಬಿ.ಎನ್. ವಾಸರೆ ಕಳಕಳಿ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ ಮಾತನಾಡಿ, “ಕಳೆದ ಐದು ವರ್ಷಗಳಿಂದ ಕಸಾಪ ವತಿಯಿಂದ ಕನ್ನಡ ಭಾಷೆಯಲ್ಲಿ ನೂರು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸುತ್ತಾ ಬರಲಾಗುತ್ತಿದ್ದು, ಇದುವರೆಗೆ ಸುಮಾರು ಐದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಅಭಿನಂದಿಸಲಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಕನ್ನಡ ಶಾಲೆಗಳು ಮುಚ್ಚಲ್ಪಡುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ನಮ್ಮ ನಾಡಭಾಷೆಯನ್ನು ಕೊಲ್ಲುವಷ್ಟು ಅನ್ಯಭಾಷೆಯ ವ್ಯಾಮೋಹ ನಮಗೆ ಬೇಡ. ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸೀಮಿತವಾಗದೆ ಕನ್ನಡ ಸಾಹಿತ್ಯವನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಸಮಾಜದಲ್ಲಿ ಕನ್ನಡ ಪ್ರೀತಿಯನ್ನು ಬಿತ್ತುವ ಕೆಲಸವನ್ನು ಪರಿಷತ್ತು ನಿರಂತರವಾಗಿ ಮಾಡುತ್ತಿದೆ” ಎಂದರು.


ಸಾಧಕರಿಗೆ ಸನ್ಮಾನ ಮತ್ತು ಗಣ್ಯರ ಉಪಸ್ಥಿತಿ
ಇದೇ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯ ಕನ್ನಡ ವಿಷಯದಲ್ಲಿ ಶೇ. 100 ಅಂಕ ಗಳಿಸಿದ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅತ್ಯಂತ ಗೌರವದಿಂದ ಅಭಿನಂದಿಸಲಾಯಿತು. ಇದೇ ವೇಳೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಂ.ಜಿ. ನಾಯ್ಕ ಮತ್ತು ತಾಲೂಕು ಅಧ್ಯಕ್ಷ ಸುಧೀಶ ನಾಯ್ಕ ಅವರನ್ನು ಪರಿಷತ್ತಿನ ವತಿಯಿಂದ ಸನ್ಮಾನಿಸಲಾಯಿತು.
ಮಾಧ್ಯಮಿಕ ಶಾಲಾ ಮುಖ್ಯಾಧ್ಯಾಪಕರ ಸಂಘದ ಜಿಲ್ಲಾಧ್ಯಕ್ಷ ಎಲ್.ಎಂ. ಹೆಗಡೆ, ಸಾಹಿತಿ ಸುರೇಶ ನಾಯ್ಕ, ನ್ಯೂ ಇಂಗ್ಲೀಷ್ ಸ್ಕೂಲ್ ಸಂಸ್ಥೆಯ ಅಧ್ಯಕ್ಷ ರಘು ಪೈ ಕಾರ್ಯಕ್ರಮದ ಕುರಿತು ತಮ್ಮ ಮೆಚ್ಚುಗೆಯ ಮಾತುಗಳನ್ನಾಡಿದರು.
ವೇದಿಕೆಯಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪಿ.ಆರ್. ನಾಯ್ಕ, ಕಸಾಪ ಕೋಶಾಧ್ಯಕ್ಷ ನಾರಾಯಣ ಹೆಗಡೆ, ಪ್ರಮುಖರಾದ ರಾಮ ಗೊಂಡ ಹಾಗೂ ಸಾಧನಾ ಬರ್ಗಿ ಉಪಸ್ಥಿತರಿದ್ದರು.
ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಗೌರವ ಕಾರ್ಯದರ್ಶಿ ಎಚ್.ಎಂ. ಮಾರುತಿ ಸ್ವಾಗತಿಸಿದರು. ತಾಲೂಕು ಅಧ್ಯಕ್ಷ ಎಸ್.ಎಚ್. ಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಪರಿಷತ್ತಿನ ಸದಸ್ಯ ಕೇಶವ ಶೆಟ್ಟಿ ವಂದನಾರ್ಪಣೆ ನೆರವೇರಿಸಿದರು. ಮಹೇಶ ಭಂಡಾರಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು.
About The Author




More Stories
ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕೆನರಾ ಎಕ್ಸಲೆನ್ಸ್ ಪಿಯು ಕಾಲೇಜು ಪ್ರಥಮ, ರಾಜ್ಯ ಮಟ್ಟಕ್ಕೆ ಆಯ್ಕೆ!
ಡಿ. ದೇವರಾಜ ಅರಸು 111ನೇ ಜನ್ಮದಿನಾಚರಣೆ: ಸಾಧಕರ ಸ್ವಗೃಹದಲ್ಲೇ ಸನ್ಮಾನಿಸಿ ಗೌರವಿಸಿದ ಅರಸು ವಿಚಾರ ವೇದಿಕೆ.
ದೇವರಾಜ ಅರಸು ಸಾಮಾಜಿಕ ನ್ಯಾಯದ ಹರಿಕಾರ: ಹೊನ್ನಾವರದಲ್ಲಿ ಮಾಜಿ ಸಿಎಂ ಜನ್ಮದಿನಾಚರಣೆ.