

ಹೊನ್ನಾವರ: ಕಳೆದ ಹಲವು ವರ್ಷಗಳಿಂದ ಪರಿಸರ ಸಂರಕ್ಷಣೆಯ ನಿರಂತರ ಕಾಯಕದಲ್ಲಿ ತೊಡಗಿಸಿಕೊಂಡಿರುವ ರೋಟರಿ ಸಂಸ್ಥೆಯು, ಪ್ರಸಕ್ತ ಸಾಲಿನಲ್ಲಿ ತಾಲೂಕಿನ ಸುರಕಟ್ಟೆ, ಹಳಗೇರಿ ಮತ್ತು ತನ್ಮಡಗಿಯ ಹಿರಿಯ ಹಾಗೂ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳೊಂದಿಗೆ ಸೇರಿ ಸಸಿ ನೆಡುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು.
ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿವಿಧ 100 ಜಾತಿಯ ಹಣ್ಣಿನ ಸಸಿಗಳನ್ನು ನೆಡಲಾಯಿತು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ, ಅರಣ್ಯಗಳ ಮಹತ್ವ ಹಾಗೂ ಮುಂದಿನ ಪೀಳಿಗೆಗೆ ಹಸಿರು ವಾತಾವರಣವನ್ನು ಉಳಿಸುವ ಅಗತ್ಯತೆಯ ಕುರಿತು ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರೋಟರಿ ಕ್ಲಬ್ ಅಧ್ಯಕ್ಷ ಹೆನ್ರಿ ಲೀಮಾ ಅವರು, “ಒಬ್ಬ ವಿದ್ಯಾರ್ಥಿ ಕನಿಷ್ಠ ಒಂದು ಸಸಿ ನೆಟ್ಟು ಅದನ್ನು ಪೋಷಿಸಿ ಬೆಳೆಸುವ ಸಂಕಲ್ಪ ಮಾಡಿದರೆ, ಪರಿಸರ ಸಂರಕ್ಷಣೆಗೆ ಮಹತ್ತರ ಕೊಡುಗೆ ನೀಡಿದಂತಾಗುತ್ತದೆ,” ಎಂದು ಕರೆ ನೀಡಿದರು. ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಭಾಗವಹಿಸಿ ನೆಟ್ಟ ಸಸಿಗಳ ಸಂರಕ್ಷಣೆಯ ಜವಾಬ್ದಾರಿಯನ್ನು ತಾವೇ ಸ್ವೀಕರಿಸಿದರು. ಈ ಕಾರ್ಯಕ್ರಮಕ್ಕೆ ಉಚಿತವಾಗಿ ಸಸಿಗಳನ್ನು ನೀಡಿ ಸಹಕರಿಸಿದ ಅರಣ್ಯ ಇಲಾಖೆಗೆ ಸಂಸ್ಥೆಯ ಪರವಾಗಿ ಅಭಿನಂದನೆ ಸಲ್ಲಿಸಲಾಯಿತು.

ಪ್ರಮುಖರ ಉಪಸ್ಥಿತಿ:
ಸಮಾರಂಭದಲ್ಲಿ ರೋಟರಿ ಕ್ಲಬ್ ಕಾರ್ಯದರ್ಶಿ ಶ್ರೀಕಾಂತ ನಾಯ್ಕ, ಹಿರಿಯ ರೋಟರಿಯನ್ ಮನ್ವೇಲ್ ಸ್ಟೀಫನ್ ರೋಡ್ರಿಗೀಸ್, ಇವೆಂಟ್ ಚೇರಮನ್ ಡಾ. ರಾಜೇಶ ನಾಯ್ಕ ಹಾಗೂ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ರೋಟರಿ ಕ್ಲಬ್ ಸದಸ್ಯರು ವಿದ್ಯಾರ್ಥಿಗಳೊಂದಿಗೆ ಕೈಜೋಡಿಸಿ ಸಸಿಗಳನ್ನು ನೆಟ್ಟು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

About The Author




More Stories
ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕೆನರಾ ಎಕ್ಸಲೆನ್ಸ್ ಪಿಯು ಕಾಲೇಜು ಪ್ರಥಮ, ರಾಜ್ಯ ಮಟ್ಟಕ್ಕೆ ಆಯ್ಕೆ!
ಡಿ. ದೇವರಾಜ ಅರಸು 111ನೇ ಜನ್ಮದಿನಾಚರಣೆ: ಸಾಧಕರ ಸ್ವಗೃಹದಲ್ಲೇ ಸನ್ಮಾನಿಸಿ ಗೌರವಿಸಿದ ಅರಸು ವಿಚಾರ ವೇದಿಕೆ.
ದೇವರಾಜ ಅರಸು ಸಾಮಾಜಿಕ ನ್ಯಾಯದ ಹರಿಕಾರ: ಹೊನ್ನಾವರದಲ್ಲಿ ಮಾಜಿ ಸಿಎಂ ಜನ್ಮದಿನಾಚರಣೆ.