August 23, 2026

ಮಂಕಾಳು ವೈದ್ಯರಿಗೆ ಅವಮಾನ: ಕಾಂಗ್ರೆಸ್ ಹಿಂದುಳಿದ ವರ್ಗದ ವಿರೋಧಿ ಎಂದು ಸಾಬೀತಾಗಿದೆ – ಅನಂತಮೂರ್ತಿ ಹೆಗಡೆ ಆಕ್ರೋಶ

ಶಿರಸಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಜಿಲ್ಲೆಯ ಜನರಿಗೆ ಹಾಗೂ ಸಣ್ಣ ಸಮುದಾಯಗಳಿಗೆ ತೀವ್ರ ಅವಮಾನ ಮಾಡಿದೆ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ನೂತನ ಸಚಿವ ಸಂಪುಟದ ಮೊದಲ ಪಟ್ಟಿಯಲ್ಲಿ ಭಟ್ಕಳ ಶಾಸಕ ಮಂಕಾಳು ವೈದ್ಯ ಅವರಿಗೆ ಸಚಿವ ಸ್ಥಾನ ನೀಡಲಾಗುವುದು ಎಂದು ಅಧಿಕೃತವಾಗಿ ಪ್ರಕಟಿಸಿ, ಕೊನೆಯ ಕ್ಷಣದಲ್ಲಿ ಅವರನ್ನು ಕೈಬಿಡಲಾಗಿದೆ. ಈ ಮೂಲಕ ಕಾಂಗ್ರೆಸ್ ಹೈಕಮಾಂಡ್ ಹಿಂದುಳಿದ ವರ್ಗ ಹಾಗೂ ಸಣ್ಣ ಸಮುದಾಯಗಳ ವಿರೋಧಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಆರೋಪಿಸಿದರು.

‘ಪ್ರಿಂಟಿಂಗ್ ದೋಷ’ ನೆಪ ಹಾಸ್ಯಾಸ್ಪದ

ಸಚಿವ ಸ್ಥಾನದ ಪಟ್ಟಿಯಲ್ಲಿ ಮಂಕಾಳು ವೈದ್ಯರ ಹೆಸರು ಪ್ರಕಟವಾದ ಬಳಿಕ, “ಎಸ್.ಎಸ್. ಮಲ್ಲಿಕಾರ್ಜುನ್ ಎಂದು ಬರೆಯುವ ಬದಲು ಪ್ರಿಂಟಿಂಗ್ ದೋಷದಿಂದ ವೈದ್ಯರ ಹೆಸರು ಬಂದಿದೆ” ಎಂದು ಕಾಂಗ್ರೆಸ್ ನೀಡಿರುವ ಸಮಜಾಯಿಷಿ ಅತ್ಯಂತ ಬಾಲಿಶ ಹಾಗೂ ಹಾಸ್ಯಾಸ್ಪದವಾಗಿದೆ. ಕಾಂಗ್ರೆಸ್‌ನ ಈ ನಡೆ ಜಿಲ್ಲೆಯ ಸ್ವಾಭಿಮಾನಿ ಜನತೆಗೆ ಎಸಗಿದ ದ್ರೋಹ ಎಂದು ಅನಂತಮೂರ್ತಿ ಹೆಗಡೆ ಕಿಡಿಕಾರಿದರು.

ಉತ್ತರ ಕನ್ನಡ ಜಿಲ್ಲೆಗೆ ಘೋರ ಅನ್ಯಾಯ

ಕಲಬುರಗಿ ಒಂದೇ ಜಿಲ್ಲೆಗೆ ಮೂರು ಸಚಿವ ಸ್ಥಾನಗಳನ್ನು ನೀಡಿರುವ ಸರ್ಕಾರ, ಭೌಗೋಳಿಕವಾಗಿ ಗೋವಾ ರಾಜ್ಯಕ್ಕಿಂತ ಮೂರು ಪಟ್ಟು ದೊಡ್ಡದಾಗಿರುವ ಉತ್ತರ ಕನ್ನಡ ಜಿಲ್ಲೆಗೆ ಒಂದೇ ಒಂದು ಸಚಿವ ಸ್ಥಾನವನ್ನೂ ನೀಡದಿರುವುದು ಅನ್ಯಾಯದ ಪರಮಾವಧಿ.

“ಪ್ರಸ್ತುತ ಮಳೆಗಾಲ ಆರಂಭವಾಗಿದ್ದು, ಕರಾವಳಿ ಮತ್ತು ಗುಡ್ಡಗಾಡು ಪ್ರದೇಶ ಹೊಂದಿರುವ ಉತ್ತರ ಕನ್ನಡದಲ್ಲಿ ಪ್ರಕೃತಿ ವಿಕೋಪ ಸಂಭವಿಸಿದರೆ ಸಂತ್ರಸ್ತರಿಗೆ ನೆರವಾಗಲು ಜಿಲ್ಲೆಗೆ ಸಚಿವರೇ ಇಲ್ಲದಂತಾಗಿದೆ. ಕೈಗಾ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ, ಬೇಡ್ತಿ–ಅಘನಾಶಿನಿ ನದಿ ಜೋಡಣೆಯಂತಹ ಜ್ವಲಂತ ಸಮಸ್ಯೆಗಳು ಜಿಲ್ಲೆಯ ಮುಂದಿವೆ. ಜಿಲ್ಲೆಗೆ ಉಸ್ತುವಾರಿ ಸಚಿವರನ್ನೂ ನೇಮಿಸದೆ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ.”
– ಅನಂತಮೂರ್ತಿ ಹೆಗಡೆ, ಜಿಲ್ಲಾಧ್ಯಕ್ಷರು, ಬಿಜೆಪಿ ರೈತ ಮೋರ್ಚಾ

ಜನರು ತಕ್ಕ ಪಾಠ ಕಲಿಸಲಿದ್ದಾರೆ

ಗ್ಯಾರಂಟಿಗಳ ಆಮಿಷವೊಡ್ಡಿ ಕಳೆದ ಚುನಾವಣೆಯಲ್ಲಿ ಜಿಲ್ಲೆಯ ನಾಲ್ವರು ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸಿಕೊಂಡಿದ್ದ ಜನರು, ಈಗ ಕಾಂಗ್ರೆಸ್‌ನ ಈ ಧೋರಣೆಯನ್ನು ಹತ್ತಿರದಿಂದ ಗಮನಿಸುತ್ತಿದ್ದಾರೆ. ಜಿಲ್ಲೆಯ ಸ್ವಾಭಿಮಾನಕ್ಕೆ ಧಕ್ಕೆ ತಂದಿರುವ ಮತ್ತು ಹಿಂದುಳಿದ ವರ್ಗಗಳನ್ನು ಕಡೆಗಣಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಜಿಲ್ಲೆಯ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ಎಚ್ಚರಿಸಿದ್ದಾರೆ.

About The Author

error: Content is protected !!