September 8, 2026

ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ

ಭಟ್ಕಳ: ಯುವಕರು ಕ್ರೀಡೆಯ ಬಗ್ಗೆ ಆಸಕ್ತಿ ಬೆಳೆಸಿಕೊಂಡು ಕ್ರೀಡಾ ಸ್ಫೂರ್ತಿಯಿಂದ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬೇಕು. ಸೋಲು-ಗೆಲುವು ಜೀವನದ ಸಹಜ ಪ್ರಕ್ರಿಯೆಯಾಗಿದ್ದು, ಸೋಲನ್ನೇ ಗೆಲುವಿನ ಮೆಟ್ಟಿಲಾಗಿ ಸ್ವೀಕರಿಸಿ ಆತ್ಮಸ್ಥೈರ್ಯದಿಂದ ಮುನ್ನಡೆಯಬೇಕು ಎಂದು ಭಟ್ಕಳ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ರಾಜು ಮಂಜಪ್ಪ ನಾಯ್ಕ ಹೇಳಿದರು.
ತಾಲೂಕಿನ ತೆಂಗಿನಗುಂಡಿ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಭಾನುವಾರ ನಡೆದ 2026-27ನೇ ಸಾಲಿನ ದಸರಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.


ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್ ಅವರು ಕ್ರೀಡಾ ಧ್ವಜಾರೋಹಣ ನೆರವೇರಿಸಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಧರ್ಮ ನಾಯ್ಕ ಕ್ರೀಡಾ ಪ್ರತಿಜ್ಞೆ ಬೋಧಿಸಿದರು. ಸಂತೋಷ್ ನಾಯ್ಕ ಪರೇಡ್ ಕಾರ್ಯಕ್ರಮ ನೆರವೇರಿಸಿದರೆ, ರಾಜೇಶ್ ಕೆಂಗೇರಿ ಕ್ರೀಡಾ ಜ್ಯೋತಿ ಬೆಳಗಿಸುವ ಕಾರ್ಯಕ್ರಮ ನಡೆಸಿಕೊಟ್ಟರು.


ಕ್ರೀಡಾಕೂಟದಲ್ಲಿ ತಾಲೂಕಿನ ವಿವಿಧ ಭಾಗಗಳಿಂದ ಸುಮಾರು 500ರಿಂದ 600 ಕ್ರೀಡಾಪಟುಗಳು ಭಾಗವಹಿಸಿದ್ದರು. ಕ್ರೀಡಾಪಟುಗಳಿಗೆ ಉತ್ತಮ ಊಟದ ವ್ಯವಸ್ಥೆ ಕಲ್ಪಿಸಲಾಗಿದ್ದು, ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ತಾಲೂಕು ಯುವಜನ ಕ್ರೀಡಾಧಿಕಾರಿ ವೆಂಕಟೇಶ ನಾಯ್ಕ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಭಟ್ಕಳ ತಾಲೂಕು ಅಧ್ಯಕ್ಷ ಉಮೇಶ್ ಕರೆಕಟ್ಟೆ, ಸಂತೋಷ್ ಆರ್. ಶ್ರೇಷ್ಟಿ, ರಾಜು ನಾಗಯ್ಯಗೊಂಡ, ಡಿ.ಕೆ. ಅಲ್ವೇಕೊಡಿ ಸೇರಿದಂತೆ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಭಟ್ಕಳ ತಾಲೂಕಿನ ದೈಹಿಕ ಶಿಕ್ಷಕರು ತೀರ್ಪುಗಾರರಾಗಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರು ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ ಕ್ರೀಡಾಕೂಟದ ಯಶಸ್ಸಿಗೆ ಸಹಕರಿಸಿದರು. ಇವರ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಯಿತು.
ಜನಾರ್ದನ ಮೊಗೇರ್ ಕಾರ್ಯಕ್ರಮ ನಿರೂಪಿಸಿದರು. ರಾಘವೇಂದ್ರ ನಾಯ್ಕ ವಂದನಾರ್ಪಣೆ ನೆರವೇರಿಸಿದರು.

About The Author

error: Content is protected !!