September 21, 2026

ಕೆರೆ ತುಂಬಿದ ಮೇಲಷ್ಟೇ ಅಮರ್ಜಾ ಡ್ಯಾಂಗೆ ನೀರು ಬಿಡಿ: ಅಫಜಲಪುರದಲ್ಲಿ ರೈತರ ಬೃಹತ್ ರಸ್ತೆ ತಡೆ ಪ್ರತಿಭಟನೆ

ಅಫಜಲಪುರ (ಕಲಬುರಗಿ): ತಾಲೂಕಿನ ಸ್ಥಳೀಯ ಕೆರೆಗಳಿಗೆ ನೀರು ತುಂಬಿಸಿದ ನಂತರವೇ ಅಮರ್ಜಾ ಜಲಾಶಯಕ್ಕೆ ನೀರು ಹರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ನೂರಾರು ರೈತರು ಶುಕ್ರವಾರ ರಾಜ್ಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಿದರು.

ಕೆರೆ ತುಂಬಿಸಲು ಪಟ್ಟು ಹಾಗೂ ಶಾಸಕರ ಮನೆಗೆ ಮುತ್ತಿಗೆ ಎಚ್ಚರಿಕೆ: ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಮಹಾಂತೇಶ್ ಜಮಾದಾರ್, ನಮ್ಮ ಭಾಗದ ಕೆರೆಗಳು ಭರ್ತಿಯಾಗುವ ಮುನ್ನ ಅಮರ್ಜಾ ಡ್ಯಾಂಗೆ ನೀರು ಬಿಡಬಾರದು. ಮೊದಲು ಕೆರೆಗಳನ್ನು ತುಂಬಿಸಿ ಅಂತರ್ಜಲ ಮಟ್ಟ ಹೆಚ್ಚಿಸಬೇಕು. ಈ ಬೇಡಿಕೆಯನ್ನು ನಿರ್ಲಕ್ಷಿಸಿದರೆ ಮುಂದಿನ ದಿನಗಳಲ್ಲಿ ಅಫಜಲಪುರ ಶಾಸಕರ ಮನೆಗೆ ಮುತ್ತಿಗೆ ಹಾಕುವುದು ಖಚಿತ ಎಂದು ಎಚ್ಚರಿಸಿದರು.

ಸಂಚಾರ ಸ್ಥಗಿತ ಹಾಗೂ ಅಧಿಕಾರಿಗಳ ಭೇಟಿ: ಧರಣಿಯಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಭೀಮಾ ಏತ ನೀರಾವರಿ ಯೋಜನೆಯ AEE ಹಾಗೂ ತಾಲೂಕು ತಹಸೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ರೈತರ ಅಹವಾಲು ಆಲಿಸಿದರು.

ಪ್ರತಿಭಟನೆ ಹಿಂಪಡೆತ: ಕೆರೆ ತುಂಬಿಸುವ ಸಂಬಂಧ ಸೂಕ್ತ ಕ್ರಮ ಕೈಗೊಂಡು ಸಮಸ್ಯೆಯನ್ನು ಶೀಘ್ರ ಬಗೆಹರಿಸುವುದಾಗಿ ಅಧಿಕಾರಿಗಳು ಸ್ಪಷ್ಟ ಭರವಸೆ ನೀಡಿದ ಬಳಿಕ ರೈತರು ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆದರು.

    ಈ ಸಂದರ್ಭದಲ್ಲಿ ಅಫಜಲಪುರ ತಾಲೂಕು ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕು ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನೂರಾರು ರೈತರು ಉಪಸ್ಥಿತರಿದ್ದರು.

    (ವರದಿ: ಮಹೇಶ್ ಶರ್ಮಾ)

    About The Author

    error: Content is protected !!