November 22, 2026

ಬೆಳಗಾವಿಯಲ್ಲಿ ವಿಜೃಂಭಣೆಯ ೭೧ನೇ ಕನ್ನಡ ರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ಸಚಿವ ಸತೀಶ್ ಜಾರಕಿಹೊಳಿ

ಕನ್ನಡ ಭಾಷೆ ನಮ್ಮ ಅಸ್ಮಿತೆ ಹಾಗೂ ಸ್ವಾಭಿಮಾನದ ಪ್ರತೀಕ: ಜಿಲ್ಲಾ ಉಸ್ತುವಾರಿ ಸಚಿವರ ಪ್ರತಿಪಾದನೆ

ಬೆಳಗಾವಿ: ಗಡಿನಾಡು ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ೭೧ನೇ ಕರ್ನಾಟಕ ರಾಜ್ಯೋತ್ಸವದ ಅದ್ದೂರಿ ಸಮಾರಂಭವು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಜರುಗಿತು. ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಮಾರಂಭದಲ್ಲಿ ಭಾಗವಹಿಸಿ, ರಾಷ್ಟ್ರಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿ, ತಾಯಿ ಭುವನೇಶ್ವರಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ನಂತರ ಪೊಲೀಸ್ ಇಲಾಖೆ, ವಿವಿಧ ಭದ್ರತಾ ಪಡೆಗಳು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ನಡೆದ ಶಿಸ್ತುಬದ್ಧ ಹಾಗೂ ಆಕರ್ಷಕ ಪಥಸಂಚಲನವನ್ನು ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಲಾಯಿತು.

ಕನ್ನಡವೇ ನಮ್ಮ ಅಸ್ಮಿತೆ: ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, “ಕನ್ನಡ ಭಾಷೆ ಕೇವಲ ಸಂವಹನದ ಮಾಧ್ಯಮವಲ್ಲ; ಅದು ನಮ್ಮ ಅಸ್ಮಿತೆ, ಇತಿಹಾಸ, ಸಂಸ್ಕೃತಿ ಹಾಗೂ ಸ್ವಾಭಿಮಾನದ ಪ್ರತೀಕವಾಗಿದೆ. ಗಡಿನಾಡು ಬೆಳಗಾವಿಯಲ್ಲಿ ಕನ್ನಡದ ನೆಲ, ಜಲ ಹಾಗೂ ಸಂಸ್ಕೃತಿಯ ರಕ್ಷಣೆಗೆ ನಾವೆಲ್ಲರೂ ಬದ್ಧರಾಗಿರಬೇಕು. ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆ ನಮ್ಮೆಲ್ಲರ ಸಾಮೂಹಿಕ ಜವಾಬ್ದಾರಿಯಾಗಿದೆ” ಎಂದರು.

ಕಾರ್ಯಕ್ರಮದಲ್ಲಿ ಶಿಕ್ಷಣ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಸಮಾಜಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು.

ರಾಣಿ ಚೆನ್ನಮ್ಮ ವೃತ್ತದಲ್ಲಿ ಸಂಭ್ರಮ: ಬೆಳಗಾವಿ ನಗರದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ವಿವಿಧ ಸ್ತಬ್ಧಚಿತ್ರಗಳ ಅದ್ದೂರಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಬಳಿಕ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಪ್ರತಿಮೆಗೆ ಶಾಸಕ ಆಸೀಫ್ (ರಾಜು) ಸೇಠ್ ಅವರೊಂದಿಗೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಲಾಯಿತು. ರಾಣಿ ಚೆನ್ನಮ್ಮ ವೃತ್ತದಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಆಯೋಜಿಸಿದ್ದ ವೇದಿಕೆಗಳಿಗೆ ಭೇಟಿ ನೀಡಿ, ಕನ್ನಡಾಭಿಮಾನಿಗಳಿಂದ ಸನ್ಮಾನ ಸ್ವೀಕರಿಸಿ ರಾಜ್ಯೋತ್ಸವದ ಶುಭಾಶಯ ವಿನಿಮಯ ಮಾಡಿಕೊಳ್ಳಲಾಯಿತು.

ಸಮಾರಂಭದಲ್ಲಿ ಶಾಸಕ ಆಸಿಫ್ ಸೇಠ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಉತ್ತರ ವಲಯ ಪೊಲೀಸ್ ಮಹಾನಿರೀಕ್ಷಕ ಸಂದೀಪ್ ಪಾಟೀಲ, ನಗರ ಪೊಲೀಸ್ ಆಯುಕ್ತ ನಿಕ್ಕಂ ಪ್ರಕಾಶ್ ಅಮೃತ್, ಪ್ರಾದೇಶಿಕ ಆಯುಕ್ತೆ ಕೆ.ಎಂ. ಜಾನಕಿ, ಎಸ್ಪಿ ಕೆ. ರಾಮರಾಜನ್, ಜಿ.ಪಂ. ಸಿಇಒ ರಾಹುಲ್ ಶಿಂಧೆ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

error: Content is protected !!