November 22, 2026

ಜನರ ಬಳಿಗೆ ಜಿಲ್ಲಾಡಳಿತ: ನ. 14ರಂದು ಬೆಳಕೆಯಲ್ಲಿ ‘ಪ್ರಜಾಸೇವೆ ಆಂದೋಲನ’

ಉಪಸಭಾಧ್ಯಕ್ಷ ಮಂಕಾಳ ವೈದ್ಯ ಅಧ್ಯಕ್ಷತೆ; ನೂತನ ಜಿಲ್ಲಾಧಿಕಾರಿ ಭೂಯರ್ ಹರ್ಷಲ್ ನಾರಾಯಣ ರಾವ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿ

ಭಟ್ಕಳ (ಉತ್ತರ ಕನ್ನಡ): ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ವಿವಿಧ ಇಲಾಖೆಗಳ ಮೂಲಕ ಸ್ಥಳದಲ್ಲೇ ಪರಿಹಾರ ಒದಗಿಸುವ ಉದ್ದೇಶದಿಂದ ಭಟ್ಕಳ-ಹೊನ್ನಾವರ ಕ್ಷೇತ್ರದ ಶಾಸಕ ಹಾಗೂ ವಿಧಾನಸಭೆ ಉಪಸಭಾಧ್ಯಕ್ಷ ಮಂಕಾಳ ಎಸ್. ವೈದ್ಯ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 14ರಂದು ‘ಪ್ರಜಾಸೇವೆ ಆಂದೋಲನ’ ಸಭೆ ಆಯೋಜಿಸಲಾಗಿದೆ.

ಬೆಳಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನಮದ್ಲು ಬೆಳಕೆಯ ಬೊಮ್ಮನಕೇರಿ ದೇವಸ್ಥಾನದ ಸಭಾಭವನದಲ್ಲಿ ಅಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಸಭೆ ಜರುಗಲಿದೆ. ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಭೂಯರ್ ಹರ್ಷಲ್ ನಾರಾಯಣ ರಾವ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಸಾರ್ವಜನಿಕರು ತಮ್ಮ ಅಹವಾಲುಗಳನ್ನು ನೇರವಾಗಿ ಜಿಲ್ಲಾಡಳಿತದ ಗಮನಕ್ಕೆ ತರಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಸಲ್ಲಿಸಲು ಅವಕಾಶ: ಗ್ರಾಮೀಣ ಭಾಗದ ಜನರು ದೈನಂದಿನ ಜೀವನದಲ್ಲಿ ಎದುರಿಸುತ್ತಿರುವ ರಸ್ತೆ ಸಂಪರ್ಕ, ಕುಡಿಯುವ ನೀರು, ಚರಂಡಿ ವ್ಯವಸ್ಥೆ, ವಿದ್ಯುತ್, ಆರೋಗ್ಯ, ಶಿಕ್ಷಣ, ಸಾರಿಗೆ, ಕಂದಾಯ, ಪಿಂಚಣಿ ಹಾಗೂ ವಸತಿ ಸೇರಿದಂತೆ ವಿವಿಧ ಸರ್ಕಾರಿ ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಅರ್ಜಿ ಸಲ್ಲಿಸಬಹುದು.

ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಿ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಹಾಗೂ ಪರಿಹಾರ ಪಡೆದುಕೊಳ್ಳಬಹುದು. ಒಂದೇ ವೇದಿಕೆಯಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಲಭ್ಯವಿರುವುದರಿಂದ ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರ ಸ್ಪಂದನೆ ದೊರೆಯಲಿದೆ. ಬೆಳಕೆ ಗ್ರಾ.ಪಂ. ವ್ಯಾಪ್ತಿಯ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ಅವಕಾಶದ ಸದುಪಯೋಗ ಪಡೆದುಕೊಳ್ಳುವಂತೆ ತಹಶೀಲ್ದಾರ್ ಉಷಾ ಪಾವಸ್ಕರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

About The Author

error: Content is protected !!