ಸರ್ಕಾರಿ ಶಾಲೆಗಳನ್ನು ದತ್ತು ನೀಡುವ ನಿರ್ಧಾರ ಕೈಬಿಡಲು ಆಗ್ರಹ; ತಹಶೀಲ್ದಾರ್, ಲೋಕೋಪಯೋಗಿ ಅಧಿಕಾರಿಗೆ ಮನವಿ
ಕೂಡ್ಲಿಗಿ (ವಿಜಯನಗರ ಜಿಲ್ಲೆ): ಅಗತ್ಯ ವಸ್ತುಗಳ ಬೆಲೆ ಏರಿಕೆ, ಪಟ್ಟಣದ ಸಂಡೂರು ರಸ್ತೆಯಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಕಾಮಗಾರಿ ಹಾಗೂ ಸರ್ಕಾರಿ ಶಾಲೆಗಳನ್ನು ದತ್ತು ನೀಡುವ ಜನವಿರೋಧಿ ನೀತಿಯನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) – ಸಿಪಿಐ(ಎಂ) ವತಿಯಿಂದ ಪಟ್ಟಣದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಕಾರ್ಮಿಕ ಮುಖಂಡ ಗುನ್ನಳ್ಳಿ ರಾಘವೇಂದ್ರ ಅವರ ನೇತೃತ್ವದಲ್ಲಿ ಜರುಗಿದ ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ತಾಲೂಕಿನ ವಿವಿಧೆಡೆಯಿಂದ ಆಗಮಿಸಿದ್ದ ಕಾರ್ಮಿಕರು ಪಾಲ್ಗೊಂಡು ಸರ್ಕಾರದ ಧೋರಣೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪ್ರತಿಭಟನಾಕಾರರು ತಹಶೀಲ್ದಾರ್ ಹಾಗೂ ಲೋಕೋಪಯೋಗಿ ಇಲಾಖೆ (PWD) ಅಧಿಕಾರಿಗಳಿಗೆ ತಮ್ಮ ವಿವಿಧ ಬೇಡಿಕೆಗಳನ್ನೊಳಗೊಂಡ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ಗುನ್ನಳ್ಳಿ ರಾಘವೇಂದ್ರ, “ಸರ್ಕಾರದ ಬೆಲೆ ಏರಿಕೆ ನೀತಿಯಿಂದ ಜನಸಾಮಾನ್ಯರು ಮತ್ತು ಕಾರ್ಮಿಕ ವರ್ಗ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಸಂಡೂರು ರಸ್ತೆಯ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ಕೈಗೊಳ್ಳಲಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಅಲ್ಲದೆ, ಸರ್ಕಾರಿ ಶಾಲೆಗಳನ್ನು ದತ್ತು ನೀಡುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಖಾಸಗೀಕರಣಗೊಳಿಸುವ ಹುನ್ನಾರ ನಡೆದಿದ್ದು, ಸರ್ಕಾರ ಈ ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು” ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಿಪಿಐ(ಎಂ) ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳ ಹೋರಾಟಗಾರರು ಉಪಸ್ಥಿತರಿದ್ದರು.
– ವರದಿ: ವಿ.ಜಿ. ವೃಷಭೇಂದ್ರ, ಕೂಡ್ಲಿಗಿ

More Stories
ಮೌಲಾನಾ ಅಬುಲ್ ಕಲಾಂ ಆಜಾದ್ ಜಯಂತಿ ಹಾಗೂ ರಾಷ್ಟ್ರೀಯ ಶಿಕ್ಷಣ ದಿನಾಚರಣೆ
ಚಂದ್ರಶೇಖರಪುರ: ಜನರ ಬಳಿಗೆ ಆಡಳಿತ; ಪ್ರಜಾ ಸೇವೆ ಆಂದೋಲನದಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅಭಯ
ಕೂಡ್ಲಿಗಿ: ಭಾರಿ ಶಬ್ದದ ಪಟಾಕಿ ಬಳಕೆಗೆ ಬ್ರೇಕ್ ಹಾಕಿ; ಪ್ರಾಣಿ-ಪಕ್ಷಿ, ರೋಗಿಗಳ ಸಂಕಟಕ್ಕೆ ಸ್ಪಂದಿಸಲು ಆಗ್ರಹ