ಪ್ರವಾಸೋದ್ಯಮ, ವ್ಯಾಪಾರ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಅನುಕೂಲ; ಪ್ರಧಾನಿ, ರೈಲ್ವೆ ಸಚಿವರು ಹಾಗೂ ಸಂಸದರಿಗೆ ಅಭಿನಂದನೆ

ಭಟ್ಕಳ (ಉತ್ತರ ಕನ್ನಡ): ಯಶವಂತಪುರ–ಮಡಗಾಂವ್ ನಡುವಿನ ವಂದೇ ಭಾರತ್ ರೈಲು ಸಂಚಾರ ಆರಂಭವಾಗಿರುವುದು ಉತ್ತರ ಕನ್ನಡ ಜಿಲ್ಲೆಯ ಸಾರಿಗೆ ಸಂಪರ್ಕದ ದೃಷ್ಟಿಯಿಂದ ಮಹತ್ವದ ಮೈಲಿಗಲ್ಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಮಾಸ್ತಪ್ಪ ನಾಯ್ಕ ಬಲ್ಸೆ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಬೆಂಗಳೂರು ಮತ್ತು ಗೋವಾ ನಡುವಿನ ಪ್ರಯಾಣವನ್ನು ಸುಗಮಗೊಳಿಸುವ ಈ ವೇಗದ ರೈಲು ಸೇವೆಯಿಂದ ಉತ್ತರ ಕನ್ನಡ ಜಿಲ್ಲೆಯ ಜನತೆಗೆ ಹೆಚ್ಚಿನ ಅನುಕೂಲವಾಗಲಿದೆ. ಜಿಲ್ಲೆಯ ಪ್ರವಾಸೋದ್ಯಮ, ವ್ಯಾಪಾರ-ವಹಿವಾಟು, ಶಿಕ್ಷಣ ಹಾಗೂ ಉದ್ಯೋಗ ಕ್ಷೇತ್ರಗಳ ಬೆಳವಣಿಗೆಗೆ ಇದು ಪೂರಕವಾಗಲಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರವಾಸೋದ್ಯಮ ಮತ್ತು ಆರ್ಥಿಕತೆಗೆ ಉತ್ತೇಜನ: “ನೈಸರ್ಗಿಕ ಸಂಪತ್ತು, ಸುಂದರ ಕಡಲತೀರಗಳು ಹಾಗೂ ಪ್ರಸಿದ್ಧ ಧಾರ್ಮಿಕ ಕೇಂದ್ರಗಳನ್ನು ಹೊಂದಿರುವ ಉತ್ತರ ಕನ್ನಡಕ್ಕೆ ಉತ್ತಮ ಸಾರಿಗೆ ಸಂಪರ್ಕದ ಅಗತ್ಯವಿತ್ತು. ವಂದೇ ಭಾರತ್ ರೈಲು ಸಂಚಾರದಿಂದ ಪ್ರವಾಸಿಗರ ಭೇಟಿ ಹೆಚ್ಚಾಗಲಿದ್ದು, ಸ್ಥಳೀಯ ವ್ಯಾಪಾರಸ್ಥರು, ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿಗೆ ವರದಾನವಾಗಲಿದೆ. ಪ್ರವಾಸೋದ್ಯಮ ಆಧಾರಿತ ಉದ್ಯಮಗಳಿಗೂ ಹೊಸ ಅವಕಾಶಗಳು ತೆರೆದುಕೊಳ್ಳಲಿವೆ” ಎಂದಿದ್ದಾರೆ.
ಜಿಲ್ಲೆಗೆ ಈ ಮಹತ್ವದ ರೈಲು ಸೇವೆ ಕಲ್ಪಿಸಲು ಸಹಕರಿಸಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವರು ಹಾಗೂ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಅಭಿನಂದನೆ ಸಲ್ಲಿಸಿರುವ ಮಾಸ್ತಪ್ಪ ನಾಯ್ಕ ಬಲ್ಸೆ, ಮುಂಬರುವ ದಿನಗಳಲ್ಲಿ ಜಿಲ್ಲೆಯ ರೈಲ್ವೆ, ರಸ್ತೆ, ಶಿಕ್ಷಣ, ಆರೋಗ್ಯ ಮತ್ತು ಕೈಗಾರಿಕಾ ಮೂಲಸೌಕರ್ಯಗಳ ಅಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

More Stories
ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾಭಾರತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಮಿಂಚು
ಜಾಲಿಯಲ್ಲಿ ಬೆಳಕೆ ವಲಯ ಮಟ್ಟದ ಪ್ರತಿಭಾ ಕಾರಂಜಿ ಸಂಭ್ರಮ
ನ್ಯಾಯಾಲಯದ ವಾರಂಟ್ ಜಾರಿಗೊಳಿಸಲು ತೆರಳಿದ್ದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಆರೋಪಿ ಪರಾರಿ!