November 22, 2026

ವಿರಾಜಪೇಟೆ: ಸಿದ್ದಾಪುರದಲ್ಲಿ ‘ಸ್ವಚ್ಛತಾ ಅಭಿಯಾನ’ಕ್ಕೆ ಶಾಸಕ ಎ.ಎಸ್. ಪೊನ್ನಣ್ಣ ಚಾಲನೆ

‘ಶುದ್ಧ ಕೊಡಗು – ಹಸಿರು ಕೊಡಗು’ ಸಂಕಲ್ಪ ಪ್ರತಿಯೊಬ್ಬರ ಮನದಲ್ಲೂ ಇರಲಿ; ಬಾಲ್ಯದಿಂದಲೇ ಮಕ್ಕಳಿಗೆ ಸ್ವಚ್ಛತೆಯ ಪಾಠ ಹೇಳಲು ಕರೆ

ವಿರಾಜಪೇಟೆ (ಕೊಡಗು): ಸಿದ್ದಾಪುರ ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ ಹಾಗೂ ‘ಸ್ವಚ್ಛ ಸಿದ್ದಾಪುರ ಸಮಿತಿ’ಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭಾಗವಹಿಸಿ, ಗಿಡಕ್ಕೆ ನೀರೆರೆಯುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಪೊನ್ನಣ್ಣ, “‘ಶುದ್ಧ ಕೊಡಗು – ಹಸಿರು ಕೊಡಗು’ ಎಂಬ ಪರಿಕಲ್ಪನೆ ಪ್ರತಿಯೊಬ್ಬರ ಮನದಲ್ಲೂ ಸದಾ ಜಾಗೃತವಾಗಿರಬೇಕು. ನಾಡಿನ ಪ್ರತಿಯೊಬ್ಬ ನಾಗರಿಕರೂ ಸ್ವಚ್ಛತೆಯ ಬಗ್ಗೆ ಕಾಳಜಿ ವಹಿಸಿ, ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಕೈಜೋಡಿಸಿದಾಗ ಮಾತ್ರ ಕೊಡಗನ್ನು ಸುಂದರ ಹಾಗೂ ಸ್ವಚ್ಛ ಜಿಲ್ಲೆಯನ್ನಾಗಿ ರೂಪಿಸಲು ಸಾಧ್ಯವಿದೆ” ಎಂದರು.

“ಬಾಲ್ಯದಿಂದಲೇ ಮಕ್ಕಳಲ್ಲಿ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯ ಅರಿವು ಮೂಡಿಸುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಪೋಷಕರು ಹಾಗೂ ಹಿರಿಯರು ತಮ್ಮ ಮಕ್ಕಳಿಗೆ ಸ್ವಚ್ಛತೆಯ ಮಹತ್ವವನ್ನು ತಿಳಿಸಿಕೊಟ್ಟು ಮಾದರಿಯಾಗಬೇಕು” ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಉದ್ಯಮಿ ಇಮ್ಯಾನುಯೆಲ್ ಥಾಮಸ್ ರಾಮಪುರಂ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಪಿ.ವಿ. ಜಾನ್ಸನ್, ವಲಯ ಅಧ್ಯಕ್ಷ ಪ್ರತೀಶ್ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು, ಸಮಿತಿಯ ಪದಾಧಿಕಾರಿಗಳು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

– ವರದಿ: ಪ್ರಿತುನ್ ಪೂವಣ್ಣ, ವಿರಾಜಪೇಟೆ

About The Author

error: Content is protected !!