November 26, 2026

ಅಂಗವೈಕಲ್ಯವನ್ನು ಮೆಟ್ಟಿ ನಿಂತು ರಾಜ್ಯಮಟ್ಟಕ್ಕೆ ಆಯ್ಕೆಯಾದ ಸಿದ್ದೇವಾಡಿ ವಿದ್ಯಾರ್ಥಿನಿ ಸೃಷ್ಟಿ ನಂದಗಾಂವೆ: ಶಾಸಕ ರಾಜು ಕಾಗೆ ಅವರಿಂದ ಸನ್ಮಾನ


ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಿದ್ದೇವಾಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸೃಷ್ಟಿ ಭರತೇಶ ನಂದಗಾಂವೆ, ತಮ್ಮ ಅಂಗವೈಕಲ್ಯವನ್ನು ಮೆಟ್ಟಿ ನಿಂತು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಅಮೋಘ ಸಾಧನೆ ಮಾಡುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಮೂಡಲಗಿ ತಾಲೂಕಿನ ತುಕಾನಟ್ಟಿಯಲ್ಲಿ ನಡೆದ 2026-27ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಸೃಷ್ಟಿ, ಭಲ್ಲೆ ಎಸೆತದಲ್ಲಿ ಪ್ರಥಮ ಸ್ಥಾನ ಹಾಗೂ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ತಾನು ಯಾರಿಗೂ ಕಡಿಮೆ ಇಲ್ಲ ಎಂಬಂತೆ ಅಸಾಧಾರಣ ಪ್ರತಿಭೆ ಮೆರೆದು ರಾಜ್ಯಮಟ್ಟಕ್ಕೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.
ವಿದ್ಯಾರ್ಥಿನಿಯ ಈ ಹೆಮ್ಮೆಯ ಸಾಧನೆಯನ್ನು ಗುರುತಿಸಿದ ಕಾಗವಾಡ ಮತಕ್ಷೇತ್ರದ ಶಾಸಕರಾದ ರಾಜು ಕಾಗೆ ಅವರು ಸೃಷ್ಟಿ ನಂದಗಾಂವೆ ಅವರನ್ನು ಆತ್ಮೀಯವಾಗಿ ಅಭಿನಂದಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, “ಸೃಷ್ಟಿಯ ಈ ಛಲ ಮತ್ತು ಸಾಧನೆ ಎಲ್ಲರಿಗೂ ಮಾದರಿಯಾಗಿದೆ. ಇವರಂತೆ ಇತರ ವಿದ್ಯಾರ್ಥಿಗಳೂ ಕ್ರೀಡೆ ಹಾಗೂ ಶಿಕ್ಷಣದಲ್ಲಿ ಉನ್ನತ ಸಾಧನೆ ಮಾಡಬೇಕು” ಎಂದು ಕರೆ ನೀಡಿದರು.

ಇದೇ ವೇಳೆ ಮದಭಾವಿ ಗ್ರಾಮದ ಮುಖಂಡರಾದ ಪ್ರವೀಣ ನಾಯಿಕ ಹಾಗೂ ಮಹಾಂತೇಶ ನೇಜ್ ಅವರು ವಿದ್ಯಾರ್ಥಿನಿಯನ್ನು ಅಭಿನಂದಿಸಿ, ರಾಜ್ಯಮಟ್ಟದಲ್ಲೂ ಉತ್ತಮ ಪ್ರದರ್ಶನ ನೀಡಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಲಿ ಎಂದು ಶುಭ ಹಾರೈಸಿದ್ದಾರೆ.

ಶಾಲೆಯ ಮುಖ್ಯೋಪಾಧ್ಯಾಯರಾದ ಪಿ. ಆರ್. ಇಂಗಳಗಾವಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಎಂ. ಬಿ. ಭಾವನವರ ಅವರ ಸೂಕ್ತ ಮಾರ್ಗದರ್ಶನದಲ್ಲಿ ತರಬೇತಿ ಪಡೆದ ಸೃಷ್ಟಿ, ಶಾಲೆಗೂ ಹಾಗೂ ಗ್ರಾಮಕ್ಕೂ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಎಲ್ಲ ಶಿಕ್ಷಕ ವೃಂದದವರು ಹರ್ಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

About The Author

error: Content is protected !!