ಕೊಡಗಿನಲ್ಲಿ ಕೇಂದ್ರ ಸಚಿವರಿಗೆ ಅದ್ದೂರಿ ಸ್ವಾಗತ; ನೂತನ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಸೋಮವಾರಪೇಟೆಯ ಪ್ರವೀಣ್ ಸರ್ವಾನುಮತದಿಂದ ಆಯ್ಕೆ
ಸೋಮವಾರಪೇಟೆ (ಕೊಡಗು): ಮುಂಬರುವ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕಾರ್ಯಕರ್ತರಿಗೆ ಧೈರ್ಯ ತುಂಬಿದರು.

ಸೋಮವಾರಪೇಟೆಯಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಭೆಯಲ್ಲಿ ಮಾತನಾಡಿದ ಅವರು, “ಕಾರ್ಯಕರ್ತರು ಯಾವುದೇ ಕಾರಣಕ್ಕೂ ಎದೆಗುಂದಬಾರದು. ಪಕ್ಷ ಸಂಘಟನೆಗಾಗಿ ಈಗಿನಿಂದಲೇ ಕಾರ್ಯಪ್ರವೃತ್ತರಾಗಿ. ಪ್ರತಿ ಹಳ್ಳಿ ಮತ್ತು ಪ್ರತಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಬೇಕು. ಜನಸಾಮಾನ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಅವರೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು” ಎಂದು ಕರೆ ನೀಡಿದರು.

ಸ್ಥಳೀಯ ಸಂಸ್ಥೆ ಚುನಾವಣೆಯೇ ದಿಕ್ಸೂಚಿ: “ಕೊಡಗು ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಬಲವಾದ ಬೇರುಗಳಿವೆ. ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳೇ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿವೆ. ಆದ್ದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ಪಕ್ಷದ ಶಕ್ತಿ ಪ್ರದರ್ಶಿಸಲು ಈಗಿನಿಂದಲೇ ಶ್ರಮಿಸಬೇಕು” ಎಂದು ಸೂಚಿಸಿದರು.
ನೂತನ ಜೆಡಿಎಸ್ ಜಿಲ್ಲಾಧ್ಯಕ್ಷರ ನೇಮಕ: ಇದೇ ಸಂದರ್ಭದಲ್ಲಿ ಕೊಡಗು ಜಿಲ್ಲಾ ಜೆಡಿಎಸ್ ನೂತನ ಅಧ್ಯಕ್ಷರಾಗಿ ಸೋಮವಾರಪೇಟೆಯ ಪ್ರವೀಣ್ ಅವರನ್ನು ನೇಮಕ ಮಾಡಲಾಯಿತು. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಾ.ರಾ. ಮಹೇಶ್ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಪ್ರವೀಣ್ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.
“ಜಿಲ್ಲೆಯಲ್ಲಿ ಜೆಡಿಎಸ್‌ಗೆ ಮತ್ತೆ ಶಕ್ತಿ ತುಂಬಲು ನೂತನ ಜಿಲ್ಲಾಧ್ಯಕ್ಷರು ಮುಂದಾಳತ್ವ ವಹಿಸಬೇಕು. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಪಕ್ಷವನ್ನು ಗೆಲ್ಲಿಸಲು ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು” ಎಂದು ಕುಮಾರಸ್ವಾಮಿ ಸಲಹೆ ನೀಡಿದರು.
ನೂತನ ಜಿಲ್ಲಾಧ್ಯಕ್ಷ ಪ್ರವೀಣ್ ಅವರಿಗೆ ಎಚ್.ಡಿ. ಕುಮಾರಸ್ವಾಮಿ, ಸಾ.ರಾ. ಮಹೇಶ್ ಹಾಗೂ ಪಕ್ಷದ ಪ್ರಮುಖರು ಅಭಿನಂದನೆ ಸಲ್ಲಿಸಿದರು. ಇದಕ್ಕೂ ಮುನ್ನ ಕೊಡಗಿಗೆ ಆಗಮಿಸಿದ ಕೇಂದ್ರ ಸಚಿವರಿಗೆ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ಸಭೆಯಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವರದಿ : ಪ್ರಿತುನ್ ಪೂವಣ್ಣ

More Stories
ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅವರಿಗೆ ಅಹಿಂದ ಬಳಗದಿಂದ ಸನ್ಮಾನ
ಶಾಂತಳ್ಳಿಯಲ್ಲಿ ₹೮೦ ಲಕ್ಷ ವೆಚ್ಚದ ಸೆಸ್ಕ್ ಸೆಕ್ಷನ್ ಕಚೇರಿಗೆ ಶಾಸಕ ಡಾ. ಮಂತರ್ ಗೌಡ ಭೂಮಿಪೂಜೆ
ವಾಲ್ಮೀಕಿ ಜಯಂತಿ ಬಹಿಷ್ಕಾರ ಹಾಗೂ ಅಧಿಕಾರಿಗಳ ಗೈರಿಗೆ ಆಕ್ರೋಶ; ಕರವೇ ಸ್ವಾಭಿಮಾನಿ ಸೇನೆಯಿಂದ ಕಠಿಣ ಕ್ರಮಕ್ಕೆ ಆಗ್ರಹ